ಹಣ ಕೊಟ್ಟು ಬಿಜೆಪಿ ಅಭ್ಯರ್ಥಿ ಖರೀದಿ : ಬಿ.ಎಸ್.ಯಡಿಯೂರಪ್ಪ ಆಕ್ರೋಶ

ಶಿವಮೊಗ್ಗ, ನ. 1: ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್‍ರವರನ್ನು ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ.ಸುರೇಶ್‍ರವರು ಹಣ ಕೊಟ್ಟು ಖರೀದಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಗುರುವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಚಂದ್ರಶೇಖರ್‍ರವರು ಬಿಜೆಪಿ ಪಕ್ಷ ಹಾಗೂ ರಾಜ್ಯದ ಜನತೆಗೆ ದ್ರೋಹ ಬಗೆಯುವ ಕೆಲಸ ಮಾಡಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್‍ರವರು ಗುರುವಾರ ಶಿವಮೊಗ್ಗ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷವೊಡ್ಡಿದ ಆಮಿಷದ ಕಾರಣದಿಂದ, ರಾಮನಗರದ ಪಕ್ಷದ ಅಭ್ಯರ್ಥಿ ಚಂದ್ರಶೇಖರ್‍ರವರು ಚುನಾವಣೆಯಿಂದ ದಿಢೀರ್ ಆಗಿ ನಿವೃತ್ತಿಯಾಗಿದ್ದಾರೆ. ಆಪರೇಷನ್ ಹಸ್ತ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಬಹುದು ಹಾಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಪತ್ನಿ ಮುಖಭಂಗ ಅನುಭವಿಸಬಹುದು ಎಂಬ ಕಾರಣದಿಂದ ಕಾಂಗ್ರೆಸ್, ಜೆಡಿಎಸ್ ನಾಯಕರು ಈ ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸಿದ್ದಾರೆ. ಆದರೆ ಮತಯಂತ್ರದಲ್ಲಿ ಬಿಜೆಪಿ ಚಿಹ್ನೆ ಹಾಗೂ ಚಂದ್ರಶೇಖರ್ ಅವರ ಹೆಸರು ಇರಲಿದೆ. ಈ ಕಾರಣದಿಂದ ರಾಮನಗರ ಮತದಾರರು ಬಿಜೆಪಿಗೆ ಮತ ಹಾಕಿ ಚಂದ್ರಶೇಖರ್ ರನ್ನು ಆಯ್ಕೆ ಮಾಡಬೇಕು. ಈ ಮೂಲಕ ಹೊಸ ಇತಿಹಾಸ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.







