ನ.10,11 ರಂದು ನಿಮ್ಮ ಮನೆಗೆ ನಮ್ಮ ಪುಸ್ತಕ ಕಾರ್ಯಕ್ರಮ
ಬೆಂಗಳೂರು, ನ.9: ಕನ್ನಡ ಪುಸ್ತಕ ಪ್ರಾಧಿಕಾರವು ಯುವಜನರಲ್ಲಿ ಸಾಹಿತ್ಯಾಭಿರುಚಿಯನ್ನು ಹೆಚ್ಚಿಸುವ ಸಲುವಾಗಿ ಒಟ್ಟು 25ಬಡಾವಣೆಗಳಲ್ಲಿ ‘ನಿಮ್ಮ ಮನೆಗೆ ನಮ್ಮ ಪುಸ್ತಕ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜನನಿಬಿಡ ಪ್ರಾಂತ್ಯಗಳು ಹಾಗೂ ಸ್ಲಂಗಳಲ್ಲಿ ಆಯ್ದ ಮನೆಗಳಲ್ಲಿ ನಿಮ್ಮ ಮನೆಗೆ ನಮ್ಮ ಪುಸ್ತಕ ಕಾರ್ಯಕ್ರಮವನ್ನು ಆಯೋಜಿಸಿ ಉಚಿತವಾಗಿ ಪುಸ್ತಕಗಳನ್ನು ವಿತರಿಸಿ, ಓದುಗರಲ್ಲಿ ಸಾಹಿತ್ಯಾಸಕ್ತಿಯನ್ನು ಹೆಚ್ಚಿಸಲಾಗುವುದು. ಈಗಾಗಲೆ ಹಲವು ಮನೆಗಳಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ ತಿಳಿಸಿದರು.
ನ.10,11 ರಂದು ಕಾರ್ಯಕ್ರಮ: ನ.10ರಂದು ಬನಶಂಕರಿ 3ನೆ ಹಂತದಲ್ಲಿರುವ ಸ್ಕೈಲೈನ್ ಸುರಭಿ ಅಪಾರ್ಟ್‌ಮೆಂಟ್ಸ್‌ನಲ್ಲಿ ನಿಮ್ಮ ಮನೆಗೆ ನಮ್ಮ ಪುಸ್ತಕ ಕಾರ್ಯಕ್ರಮವನ್ನು ಆಯೋಜಿಸಿದ್ದು, ಹಿರಿಯ ಸಾಹಿತಿ ಡಾ.ಎಚ್.ಎಸ್.ಪ್ರೇಮಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ನ.11ರಂದು ಅಗ್ರಹಾರ ದಾಸರಹಳ್ಳಿಯ ಗುಂಡೂರಾವ್ ಕಟ್ಟಡದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸಾಹಿತಿ ಡಾ.ಎಲ್.ಹನುಮಂತಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಂಗಕರ್ಮಿ ಕೆ.ವಿ.ನಾಗರಾಜಮೂರ್ತಿ ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.







