ಬಸ್ ಢಿಕ್ಕಿ: ಖಾಸಗಿ ಆಸ್ಪತ್ರೆಯ ಚಾಲಕ ಮೃತ್ಯು
ಮಂಗಳೂರು, ನ.9: ತೊಕ್ಕೊಟ್ಟುವಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಪಂಪ್‌ವೆಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ತೊಕ್ಕೊಟ್ಟು ನಿವಾಸಿ ಹರೀಶ್ (52) ಮೃತಪಟ್ಟವರು.
ಮೃತರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ 8:30ಕ್ಕೆ ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಖಾಸಗಿ ಬಸ್‌ವೊಂದು ಢಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಬಸ್‌ನ ಚಕ್ರದಡಿ ಸಿಲುಕಿದ್ದಾನೆ. ವೇಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಸವಾರನ ಮೇಲೆ ಹರಿದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ ಹರೀಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ನಗರ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





