ಉಡುಪಿ: ನ.23ರಿಂದ ಮತದಾರರ ವಿಶೇಷ ನೋಂದಣಿ
ಉಡುಪಿ, ನ.22: ಭಾರತ ರಾಜ್ಯ ಚುನಾವಣಾ ಆಯೋಗದ ನಿರ್ದೇಶನ ದಂತೆ, ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ 2019ರ ಜನವರಿ 1ನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು, ಈ ದಿನಾಂಕದಂದು 18 ವರ್ಷ ಪೂರ್ಣಗೊಳ್ಳುವ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು, ಮತದಾರರ ಪಟ್ಟಿಯಲ್ಲಿ ತಿದ್ದುಪಡಿಗಳನ್ನು ಮಾಡುವ ಸಲುವಾಗಿ ನ.23, 24 ಮತ್ತು 25ರಂದು ವಿಶೇಷ ನೋಂದಣಿ ಕಾರ್ಯಕ್ರಮವನ್ನುಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ.
ಆದುದರಿಂದ ನ.23ರಿಂದ 25ರವರೆಗೆ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಓ) ಬೆಳಗ್ಗೆ 9 ಗಂಟೆಯಿಂದ ಸಂಜೆ 6:30ರವರೆಗೆ ತಮ್ಮ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತಿದ್ದು, ಸಾರ್ವಜನಿಕರು ಮತದಾರ ಪಟ್ಟಿಗೆ ಹೆಸರು ನೋಂದಣಿ, ತಿದ್ದುಪಡಿ ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ನಿಗದಿತ ನಮೂನೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಜಿಲ್ಲೆಯ ನಾಗರಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.