ಬೆಂಗಳೂರು: ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ
ಬೆಂಗಳೂರು, ನ.24: ಬಟ್ಟೆ ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಬಟ್ಟೆ ಬೆಂಕಿಗಾಹುತಿಯಾಗಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ ಎನ್ನಲಾಗಿದೆ.
ಕಾಮಾಕ್ಷಿಪಾಳ್ಯದ ಕಾವೇರಿಪುರದ ಶನಿಮಹಾತ್ಮ ದೇವಸ್ಥಾನದ ಬಳಿಯ ಒಂದನೇ ಮೈನ್, 1ನೆ ಕ್ರಾಸ್‌ನಲ್ಲಿರುವ ಹಿಂದೂ ಫ್ಯಾಷನ್ ಅಂಗಡಿಯಲ್ಲಿ ಕಳೆದ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.
ತಕ್ಷಣ ಎರಡು ಅಗ್ನಿಶಾಮಕ ವಾಹನ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಅಷ್ಟರಲ್ಲಿ ಸುಮಾರು 5 ಲಕ್ಷ ರೂ. ಮೌಲ್ಯದ ಬಟ್ಟೆ ಬೆಂಕಿಗಾಹುತಿಯಾಗಿವೆ. ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





