ಎಂ. ಇಸ್ಮಾಯಿಲ್ ಸಾಹೇಬರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಉಡುಪಿ, ನ. 30: ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ತೋನ್ಸೆ ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿ ಮಹಮ್ಮದೀಯ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಎಂ. ಇಸ್ಮಾಯಿಲ್ ಸಾಹೇಬರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಇಂದು ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ತಾಪಂ ಅಧ್ಯಕ್ಷ ನಳಿನಿ ಪ್ರದೀಪ್ ರಾವ್ ಉಪಸ್ಥಿತರಿದ್ದರು.
ಪಡುತೋನ್ಸೆ ಗ್ರಾಮದ ಆಸುಪಾಸಿನ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಇಸ್ಮಾಯಿಲ್ ಸಾಹೇಬ್ ಶಿಕ್ಷಣ ಪ್ರೇಮಿಗಳೊಂದಿಗೆ ಸೇರಿ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು. 1971ರಲ್ಲಿ ಆರಂಭಗೊಂಡ ಈ ಸಂಸ್ಥೆಯು 1984ರಲ್ಲಿ ನರ್ಸರಿ, 1994ರಲ್ಲಿ ಅರೇಬಿಕ್ ಕಾಲೇಜು, 1996ರಲ್ಲಿ ಬಾಲಕಿಯರ ಕನ್ನಡ ಮಾಧ್ಯಮ ಪ್ರೌಢ ಶಾಲೆಯೊಂದಿಗೆ ವಿಸ್ತರಣೆಗೊಳ್ಳುತ್ತಾ ಸಾಗಿತು. 1997ರಲ್ಲಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯನ್ನು ಪ್ರಾರಂಭಿಸಲಾಯಿತು. 2009ರಲ್ಲಿ ಬಾಲಕಿಯರ ಪದವಿ ಪೂರ್ವ ಕಾಲೇಜನ್ನು, 2006ರಲ್ಲಿ ಮಹಿಳಾ ಪದವಿ ಕಾಲೇಜನ್ನು ಪ್ರಾರಂಭಿಸಲಾಯಿತು.
ಪ್ರಸ್ತುತ ಈ ಶಿಕ್ಷಣ ಸಂಸ್ಥೆಗಳಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯುತಿದ್ದಾರೆ. ಶಿಕ್ಷಣ ಸಂಸ್ಥೆಗಳು ಶೇ.100 ಫಲಿತಾಂಶವನ್ನು ಪ್ರತಿವರ್ಷ ದಾಖಲಿಸುತ್ತಿರುವುದು ಇವರ ಸಾಧನೆಯ ಕಿರೀಟಕ್ಕೆ ಇಟ್ಟ ಗರಿಯಾಗಿದೆ.