ಕ್ರೀಡಾಕೂಟದಿಂದ ಪೊಲೀಸರಿಗೆ ಉತ್ತೇಜನ: ಐಜಿಪಿ ಅರುಣ್ ಚಕ್ರವರ್ತಿ
ಮಂಗಳೂರು, ಡಿ.12: ವೃತ್ತಿ ಸವಾಲುಗಳ ನಡುವೆ ಒತ್ತಡದಿಂದ ಬದುಕುತ್ತಿರುವ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕ್ರೀಡಾಕೂಟ ಹೊಸ ಉತ್ತೇಜನ ನೀಡಿದೆ ಎಂದು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಹೇಳಿದರು.
ಮಂಗಳೂರು ನಗರ ಪೊಲೀಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಇದರ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ವಾರ್ಷಿಕ ಪೊಲೀಸ್ ಕ್ರೀಡಾಕೂಟ 2018 ಸಮಾರೋಪ ಸಮಾರಂಭದಲ್ಲಿ ಬುಧವಾರ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಜಿಲ್ಲೆಯ ಪೊಲೀಸ್ ಇಲಾಖೆಗೆ ಕೋಮು ಸಂಘರ್ಷ, ಭೂಗತ ಲೋಕ, ನಕ್ಸಲ್ ಚಟುವಟಿಕೆ ಮೊದಲಾದ ಜತೆಗೆ ಇತರ ಅಪರಾಧ ಕೃತ್ಯಗಳನ್ನು ಮಟ್ಟ ಹಾಕುವ ದೊಡ್ಡ ಸವಾಲಿದೆ. ಆ ಸವಾಲುಗಳನ್ನು ಎದುರಿಸುವ ಸಂದರ್ಭ ಸಿಬ್ಬಂದಿ ಹಾಗೂ ಅಧಿಕಾರಿಗಳು ನೇರವಾಗಿ ಅಥವಾ ಪರೋಕ್ಷವಾಗಿ ಒತ್ತಡ ಅನುವಭವಿಸುವುದು ಸಹಜ. ಅವೆಲ್ಲವುಗಳನ್ನು ಬದಿಗೊತ್ತಿ ಕ್ರೀಡಾಕೂಟದಲ್ಲಿ ಎಲ್ಲರೂ ಸಂಭ್ರಮದಿಂದ ಭಾಗವಹಿಸಿ, ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶವಾಗಿದೆ ಎಂದರು.
ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಈ ಸಂದರ್ಭ ಬಹುಮಾನ ವಿತರಿಸಲಾಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರವಿಕಾಂತೇ ಗೌಡ ಉಪಸ್ಥಿತರಿದ್ದರು. ಆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.