ತುಮಕೂರು ಕೆರೆಗಳಿಗೆ ನೀರು ತುಂಬಿಸಲು ಅಗತ್ಯ ಕ್ರಮ: ಡಿ.ಕೆ.ಶಿವಕುಮಾರ್

ಬೆಳಗಾವಿ ಡಿ.13: ಹೇಮಾವತಿ ನದಿಪಾತ್ರದಿಂದ ತುಮಕೂರು ಜಿಲ್ಲೆಯ ಕೆರೆಗಳಿಗೆ ನೀರು ಹರಿಸಲು ಇರುವ ಸಮಸ್ಯೆಯನ್ನು ಆ ಜಿಲ್ಲೆಯ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಪರಿಹರಿಸುವ ಭರವಸೆಯನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮಾಧುಸ್ವಾಮಿ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಸಂಬಂಧಪಟ್ಟ ಶಾಸಕರೊಂದಿಗೆ ಚರ್ಚೆ ನಡೆಸಲಾಗಿದೆ. ತುಮಕೂರು ಜಿಲ್ಲೆಗೆ ನೀರು ಹರಿಸುವ ವಿಚಾರದಲ್ಲಿ ಆ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.
ಇದಕ್ಕೂ ಮುನ್ನ ಮಾತನಾಡಿದ ಮಾಧುಸ್ವಾಮಿ, ಕಳೆದ 15-20 ದಿನಗಳಿಂದ ನೀರು ಬಿಟ್ಟಿಲ್ಲ. ಜಿಲ್ಲೆಯ ಸಚಿವರು, ಶಾಸಕರಿಗೆ ನೀರು ಬಿಡುವುದನ್ನು ಹೇಳುವುದಿಲ್ಲ, ನಿಲ್ಲಿಸುವುದನ್ನೂ ಹೇಳುವುದಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಹೇಮಾವತಿ ನೀರಿಗಾಗಿ ತುಮಕೂರು ಜಿಲ್ಲೆಯಲ್ಲಿ ಹೋರಾಟ, ಸತ್ಯಾಗ್ರಹ ಎಲ್ಲವನ್ನೂ ನಡೆಸಲಾಗಿದೆ. ಕೆರೆ, ಕಟ್ಟೆಗೆ ನೀರು ತುಂಬಿಸಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.







