ಉಡುಪಿ ಜಿಲ್ಲಾ ಮಟ್ಟದ ಸಹಕಾರಿ ವೈಭವ ಉದ್ಘಾಟನೆ

ಉಡುಪಿ, ಡಿ.16: ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಶತಮಾನೋತ್ಸವ ಸಂ್ರಮಾಚರಣೆಯ ಅಂಗವಾಗಿ ಸಹಕಾರಿ ಕ್ಷೇತ್ರದ ಸಿಬ್ಬಂದಿ ಗಳಿಗೆ ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಪ್ರಪ್ರಥಮ ಬಾರಿಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ರವಿವಾರ ಆಯೋಜಿಸಲಾದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ‘ಸಹಕಾರ ವೈಭವ’ವನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಪ್ರಮೋದ್ ಮಧ್ವರಾಜ್, ಪ್ರತಿಭೆ ಎಂಬುದು ಎಲ್ಲ ರಲ್ಲೂ ಇರುತ್ತದೆ. ಅದನ್ನು ತೋರಿಸಲು ಅವಕಾಶ ನೀಡುವುದು ಅತಿ ಅಗತ್ಯ. ಸಹಕಾರಿ ಕ್ಷೇತ್ರದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇಂತಹ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವೃತ್ತಿ ನಿರತ ಕಲಾವಿದರಿಗಿಂತಲೂ ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿದರು.
ಅಧ್ಯಕ್ಷತೆಯನ್ನು ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಹಿರಿಯ ಸಹಕಾರಿ ಕೃಷ್ಣರಾಜ ಸರಳಾಯ ಹಾಗೂ ದುಬೈ ಅನಿವಾಸಿ ತುಳುವರ ತುಳು ಕೂಟದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರಪ್ರತಿಮಾ, ಅವಿಭಜಿತ ದ.ಕ. ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಸೊಸೈಟಿಯ ಉಪಾಧ್ಯಕ್ಷ ಉಮಾನಾಥ್ ಮೊದಲಾದವರು ಉಪಸ್ಥಿತರಿದ್ದರು.
ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಯಾವರ ಶಾಖೆಯ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು.