Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿಸೆಂಬರ್ ಅಂತ್ಯಕ್ಕೆ ಮತ್ತಷ್ಟು ಬರಪೀಡಿತ...

ಡಿಸೆಂಬರ್ ಅಂತ್ಯಕ್ಕೆ ಮತ್ತಷ್ಟು ಬರಪೀಡಿತ ತಾಲೂಕುಗಳ ಘೋಷಣೆ: ಸಚಿವ ದೇಶಪಾಂಡೆ

ಬರಪೀಡಿತ ತಾಲೂಕುಗಳಿಗೆ ಹೆಚ್ಚುವರಿ 50 ಲಕ್ಷ ರೂ.ಅನುದಾನ

ವಾರ್ತಾಭಾರತಿವಾರ್ತಾಭಾರತಿ19 Dec 2018 9:26 PM IST
share
ಡಿಸೆಂಬರ್ ಅಂತ್ಯಕ್ಕೆ ಮತ್ತಷ್ಟು ಬರಪೀಡಿತ ತಾಲೂಕುಗಳ ಘೋಷಣೆ: ಸಚಿವ ದೇಶಪಾಂಡೆ

ಬೆಳಗಾವಿ, ಡಿ.19: ರಾಜ್ಯದಲ್ಲಿ ಈಗಾಗಲೇ ಘೋಷಣೆಯಾಗಿರುವ ನೂರು ಬರಪೀಡಿತ ತಾಲೂಕುಗಳಿಗೆ ಹೆಚ್ಚುವರಿಯಾಗಿ 50 ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಹಾಗೂ ಈ ತಿಂಗಳಾಂತ್ಯದಲ್ಲಿ ಮತ್ತಷ್ಟು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡುವುದಾಗಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಬುಧವಾರ ವಿಧಾನ ಸಭೆಯಲ್ಲಿ ಬರಗಾಲ ಕುರಿತಂತೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ಕೇಂದ್ರ ಸರಕಾರದ ಬರ ನಿರ್ವಹಣೆ ಕೈಪಿಡಿ-2016 ರ ಅನ್ವಯ ರಾಜ್ಯದಲ್ಲಿ ಈಗಾಗಲೇ 100 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೇ ಡಿ.31 ರ ನಂತರ ಮತ್ತಷ್ಟು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ಘೋಷಿಸಿರುವ ಬರಪೀಡಿತ ತಾಲೂಕುಗಳಿಗೆ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ತಲಾ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಆದಾಗ್ಯೂ ಬರದ ತೀಕ್ಷ್ಣತೆಯನ್ನು ಗಮನಿಸಿ ಹೆಚ್ಚುವರಿಯಾಗಿ 50 ಲಕ್ಷ ರೂ. ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಬರ ನಿರ್ವಹಣೆ ಸಂಬಂಧ ಸರಕಾರ ಮುಂದಾಲೋಚನೆ ಮಾಡಿ ಎಲ್ಲಾ ಅಗತ್ಯ ಕ್ರಮ ಕೈಗೊಂಡಿದೆ. ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸುವ ಸಂಬಂಧ ಕೈಗೊಳ್ಳಬಹುದಾದ ಎಲ್ಲಾ ಕಾರ್ಯಕ್ರಮಗಳಿಗೂ ಯಾವುದೇ ಹಣಕಾಸಿನ ಕೊರತೆ ಇಲ್ಲ ಎಂದು ದೇಶಪಾಂಡೆ ಸ್ಪಷ್ಟಪಡಿಸಿದರು.

2001 ರಿಂದ 2018ರವರೆಗೆ 18 ವರ್ಷಗಳಲ್ಲಿ ಕರ್ನಾಟಕ ರಾಜ್ಯವು 14 ವರ್ಷಗಳ ಕಾಲ ಬರ ಪರಿಸ್ಥಿತಿ ಎದುರಿಸಿದೆ. ಕೇಂದ್ರ ಸರಕಾರವು ದೇಶದಲ್ಲಿ ನಿರಂತರವಾಗಿ ಬರಗಾಲಕ್ಕೆ ತುತ್ತಾಗುತ್ತಿರುವ 24 ಜಿಲ್ಲೆಗಳನ್ನು ಗುರುತಿಸಿ, ಈ ಪೈಕಿ 16 ಜಿಲ್ಲೆಗಳು ನಮ್ಮ ರಾಜ್ಯಕ್ಕೆ ಸೇರಿವೆ. ಈ ಹಿನ್ನೆಲೆಯಲ್ಲಿ ಸತತ ಬರಗಾಲ ಸ್ಥಿತಿಯಲ್ಲಿರುವ ನಮ್ಮ ರಾಜ್ಯದಲ್ಲಿನ ಬರಪರಿಸ್ಥಿತಿ ನಿಭಾಯಿಸಲು ರಾಜ್ಯ ಸರಕಾರ ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಅವರು ಹೇಳಿದರು.

ಕಳೆದ ಮುಂಗಾರಿನಲ್ಲಿ ಕೊಡಗು, ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ಮಾತ್ರ 804 ಮಿ.ಮೀ. ಮಳೆ ಬಿದ್ದಿದ್ದು, ಉಳಿದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ತೋಟಗಾರಿಕೆ, ಕೃಷಿ ಬೆಳೆಗಳು ಸೇರಿದಂತೆ ಮುಂಗಾರು ಬೆಳೆ ಉತ್ಪಾದನೆಯಲ್ಲಿ ಕುಂಠಿತವಾಗಿದೆ ಹಾಗೂ ಸಾಕಷ್ಟು ಬೆಳೆಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಇನ್‍ಪುಟ್ ಸಬ್ಸಿಡಿ ಪರಿಹಾರಗಳನ್ನು ಈಗಾಗಲೇ ರಾಜ್ಯದ ರೈತರಿಗೆ ವಿತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಉಲ್ಬಣಿಸಿರುವ ಬರ ಪರಿಸ್ಥಿತಿಯನ್ನು ಎಲ್ಲಾ ಇಲಾಖೆಗಳ ಸಹಕಾರದಿಂದ ನಿಭಾಯಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಲುವಾಗಿ ಏಳು ಸಚಿವ ಸಂಪುಟ ಸಭೆಗಳನ್ನು ಮಾಡಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿಯವರು ಪತ್ರ ಬರೆದು ಬರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ ಎಂದು ದೇಶಪಾಂಡೆ ಹೇಳಿದರು.

ಬರಗಾಲಕ್ಕೆ ತುತ್ತಾಗಿರುವ ತಾಲೂಕುಗಳಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಆದ್ಯತೆ ಮೇಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಬರಪೀಡಿತ ತಾಲೂಕುಗಳೆಂದು ಘೋಷಣೆ ಆಗದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ತಾಲೂಕುಗಳಿಗೂ ತಲಾ 25 ಲಕ್ಷ ರೂ. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಜ್ಯದ 17 ಜಿಲ್ಲೆಗಳ 209 ಗ್ರಾಮಗಳಲ್ಲಿ 409 ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಲ್ಲದೇ 382 ಖಾಸಗಿ ಕೊಳವೆಬಾವಿ ಮಾಲಕರೊಂದಿಗೆ ಕುಡಿಯುವ ನೀರು ಒದಗಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಲದೇ ಆಯಾ ತಾಲೂಕುಗಳಲ್ಲಿ ತಹಶೀಲ್ದಾರರ ಪಿ.ಡಿ. ಖಾತೆಗಳಲ್ಲಿ ಕನಿಷ್ಠ 10 ಲಕ್ಷ ರೂ.ಹಣ ಇಡಲಾಗಿದೆ ಎಂದು ದೇಶಪಾಂಡೆ ತಿಳಿಸಿದರು. 

ರಾಜ್ಯದಲ್ಲಿ ಜಾನುವಾರುಗಳಿಗೆ 92.62 ಮೆಟ್ರಿಕ್‍ಟನ್ ಮೇವಿನ ಅಗತ್ಯವಿದೆ. ಈಗಾಗಲೇ ಪಶುಸಂಗೋಪನೆ ಇಲಾಖೆಯಿಂದ 15 ಕೋಟಿ. ರೂ. ವೆಚ್ಚದಲ್ಲಿ ಮೇವಿನ ಮಿನಿ ಕಿಟ್‍ಗಳನ್ನು ವಿತರಿಸಲಾಗಿದೆ. ಜಿಲ್ಲಾಧಿಕಾರಿಗಳ ಮೂಲಕ ಮೇವು ಸಂಗ್ರಹಣಾ ಕೇಂದ್ರ ಹಾಗೂ ಗೋಶಾಲೆಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದ್ದು, ರಾಜ್ಯದಲ್ಲಿ 224 ಮೇವು ಸಂಗ್ರಹಣಾ ಕೇಂದ್ರಗಳು ಹಾಗೂ 294 ಗೋಶಾಲೆಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಅಲ್ಲದೇ ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇನ್ನಿತರ ಕೆಲವು ಜಿಲ್ಲೆಗಳಲ್ಲಿ ಹಸಿರು ಮೇವು ಬೆಳೆಯಲು ಹೆಚ್ಚುವರಿಯಾಗಿ ಕಿಟ್‍ಗಳನ್ನು ವಿತರಿಸಲಾಗಿದೆ ಎಂದು ಅವರು ಹೇಳಿದರು.

ಬರಗಾಲದ ಸ್ಥಿತಿಯಲ್ಲಿ ರಾಜ್ಯದ ಜನರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ಪ್ರತಿ ಜಾಬ್‍ಕಾರ್ಡ್ ದಾರರಿಗೆ ಪ್ರಸ್ತುತ ಈಗಿರುವ ವಾರ್ಷಿಕ 100 ದಿನಗಳನ್ನು ಪರಿಷ್ಕರಿಸಿ 150 ದಿನಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆಯ ಉದ್ಯೋಗಗಳನ್ನು ಸೃಜಿಸಲು ಚಿಂತಿಸಲಾಗಿದೆ ಎಂದು ದೇಶಪಾಂಡೆ ತಿಳಿಸಿದರು.

ಬರಪೀಡಿತ ತಾಲೂಕುಗಳಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಸ ಕೈಗೊಳ್ಳುವ ಮೂಲಕ, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದೆ. ಅಲ್ಲದೇ ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯವರ ನೇತೃತ್ವದಲ್ಲಿ ಹವಾಮಾನ ನಿಗಾವಹಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 5 ಕೋಟಿಯಂತೆ ರಾಜ್ಯಾದ್ಯಂತ 226 ಕೋಟಿ  ರೂ. ಅನುದಾನ ಲಭ್ಯವಿದೆ. ಈಗಾಗಲೇ ಎಪ್ರಿಲ್ ನಿಂದ ನವೆಂಬರ್ ವರೆಗೆ 142.58 ಕೋಟಿ ರೂ. ವೆಚ್ಚ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿರುವ ಅನುದಾನ 5 ಕೋಟಿಗಿಂತ ಕಡಿಮೆ ಇದ್ದಲ್ಲಿ ಅನುದಾನದ ಬೇಡಿಕೆಯನ್ವಯ ಮಂಜೂರಾತಿ ನೀಡಲಾಗುವುದು. ಬರಪರಿಸ್ಥಿತಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ಹಣಕಾಸಿನ ಕೊರತೆ ಇಲ್ಲ ಎಂದು ಅವರು ಹೇಳಿದರು.

ಈ ವರ್ಷದ ಮುಂಗಾರಿನಲ್ಲಿ ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ 546 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಈಗಾಗಲೇ ಬೆಳೆಯ ಹಾನಿ ಸಂತ್ರಸ್ತ ರೈತರ ಖಾತೆಗೆ ಪರಿಹಾರ ಜಮಾ ಮಾಡಲಾಗುತ್ತಿದೆ. ಮುಂದಿನ ಒಂದು ವಾರದೊಳಗಾಗಿ ಜಿಲ್ಲೆಯ ಎಲ್ಲಾ ರೈತರ ಖಾತೆಗಳಲ್ಲಿ ಈ ಪರಿಹಾರ ಹಣ ಜಮಾ ಆಗಲಿದೆ. ಅಲ್ಲದೇ ಅತಿವೃಷ್ಟಿಯಿಂದ ಜೀವಹಾನಿಗೊಳಗಾದ ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯಸರ್ಕಾರದ ಪರಿಹಾರ ಸೇರಿ ತಲಾ 7 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದು ದೇಶಪಾಂಡೆ ತಿಳಿಸಿದರು.

ಮುಂಗಾರಿನಲ್ಲಿ ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿ ಸಮೀಕ್ಷೆಗೆ ಕೇಂದ್ರ ಸರ್ಕಾರದ ತಂಡ ಆಗಮಿಸಿ ಸುಮಾರು 13 ಜಿಲ್ಲೆಗಳಲ್ಲಿ ಪ್ರವಾಸ ಮಾಡಿತ್ತು. ಈ ಸಂದರ್ಭದಲ್ಲಿ ಅತಿವೃಷ್ಟಿ ನಿರ್ವಹಣೆಯಲ್ಲಿ ರಾಜ್ಯಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ತಂಡ ಪ್ರಶಂಸೆ ವ್ಯಕ್ತಪಡಿಸಿದೆ. ಆದರೂ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಆಂಧ್ರಪ್ರದೇಶ ಹಾಗೂ ರಾಜಸ್ಥಾನಗಳಿಗೆ ಹೋಲಿಸಿದರೆ ರಾಜ್ಯಸರ್ಕಾರಕ್ಕೆ ಬಿಡುಗಡೆಯಾಗಿರುವ ಮೊತ್ತ ಅತ್ಯಂತ ಕಡಿಮೆ ಇದೆ. ಈ ಸಂಬಂಧ ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಿಗೆ ಪತ್ರ ಬರೆದಿದ್ದು, ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಉತ್ತರ ದೊರೆತಿದೆ. ಹೆಚ್ಚುವರಿ ಅನುದಾನ ಬಿಡುಗಡೆಯಾಗುವ ವಿಶ್ವಾಸ ಇದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X