ಉಡುಪಿ: ಡಿ.23ರಂದು ರೈತ ಜನ ಸಂಪರ್ಕ ಸಭೆ
ಉಡುಪಿ, ಡಿ.19: ಇದೇ ಡಿ.23ರಂದು ರವಿವಾರ ಅಂತಾರಾಷ್ಟ್ರೀಯ ರೈತ ದಿನಾಚರಣೆಯ ಅಂಗವಾಗಿ ರೈತ ಜನ ಸಂಪರ್ಕ ಸಭೆಯನ್ನು ಬೆಳಗ್ಗೆ 11 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಅಮೂಲ್ಯ ಸಾಧನೆಗೈದ ಉಡುಪಿ ಜಿಲ್ಲೆಯ 40 ಮಂದಿ ರೈತರನ್ನು ಸನ್ಮಾನಿಸಲಾಗುವುದು. ಇದರೊಂದಿಗೆ ಜಿಲ್ಲೆಯ ವಿವಿಧ ರೈತಪರ ಸಂಘಟನೆಗಳಿಂದ ಆಗಮಿಸುವ ಕೃಷಿಕರೊಂದಿಗೆ ಕೃಷಿ ಮತ್ತು ತೋಟಗಾರಿಕೆ ಅರಣ್ಯ, ಪರಿಸರ ಜೀವವಿಜ್ಞಾನ, ಬೃಹತ್ ಮತ್ತು ಸಣ್ಣ ನೀರಾವರಿ, ಕಂದಾಯ ಸಹಕಾರ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ಗಣಿ ಮತ್ತು ಭೂವಿಜ್ಞಾನ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ರೈತ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಸಂಸ್ಕೃತಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಉಪಸ್ಥಿತರಿದ್ದು, ರೈತರ ಅಹವಾಲುಗಳನ್ನು ಆಲಿಸಲಿದ್ದಾರೆ. ಜಿಲ್ಲೆಯ ರೈತರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರಕಾರದ ರೈತ ಪರ ಕಾರ್ಯಕ್ರಮಗಳ ಬಗ್ಗೆ ತಿಳಿಯುವ ಜೊತೆಗೆ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಸರಕಾರದ ಗಮನ ಸೆಳೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.