ಮಂಗಳೂರು: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂರು ಲಾರಿ, ಸೊತ್ತು ವಶ

ಮಂಗಳೂರು, ಡಿ.21: ಪರಾರಿ ಜಂಕ್ಷನ್ ಬಳಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳನ್ನು ಮಂಗಳೂರು ಗ್ರಾಮಾಂತರ ಮತ್ತು ರೌಡಿ ನಿಗ್ರಹದಳ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ನಗರದ ತಿರುವೈಲು ಗ್ರಾಮದ ಪರಾರಿ ಜಂಕ್ಷನ್ ಬಳಿ ಅನುಮಾನಾಸ್ಪದ ವಾಹನಗಳನ್ನು ತಪಾಸಣೆ ನಡೆಸುತ್ತಿದ್ಧಾಗ ಪರಾರಿ ಜಂಕ್ಷನ್ ಕಡೆಗೆ ಬರುತ್ತಿದ್ದ ಮೂರು ಟಿಪ್ಪರ್ ನಿಲ್ಲಿಸಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಯಾವುದೇ ಪರವಾನಿಗೆ ಇಲ್ಲದೆ ಟಿಪ್ಪರ್ ಲಾರಿಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿತ್ತು.
ಲಾರಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕರಿಗೆ ಹಸ್ತಾಂತರಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 25 ಲಕ್ಷ 15ಸಾವಿರ ರೂ. ಎಂದು ತಿಳಿದುಬಂದಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್, ಡಿಸಿಪಿಗಳಾದ ಹನುಮಂತರಾಯ, ಉಮಾಪ್ರಶಾಂತ್, ಎಸಿಪಿ ರಾಮರಾವ್ ಅವರ ನಿರ್ದೇಶನದಂತೆ ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಭಜಂತ್ರಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Next Story





