ಮೂರು ಬ್ಯಾಂಕ್‌ಗಳ ವಿಲೀನಕ್ಕೆ ವಿರೋಧ: ಕೇಂದ್ರ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಬೆಂಗಳೂರು, ಡಿ.26: ಬ್ಯಾಂಕ್ ಆಫ್ ಬರೋಡಾ(ಬಿಒಬಿ), ದೇನಾ ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್‌ಗಳ ವಿಲೀನವನ್ನು ವಿರೋಧಿಸಿ ಬ್ಯಾಂಕ್ ಸಿಬ್ಬಂದಿ ಕೇಂದ್ರ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಬುಧವಾರ ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಬ್ಯಾಂಕ್‌ಗಳನ್ನು ವಿಲೀನಗೊಳಿಸುವ ಕ್ರಮ ಸರಿಯಲ್ಲ ಎಂದು ಆರೋಪಿಸಿದರು.
ರಾಷ್ಟ್ರೀಕೃತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಗೊಳಿಸಬೇಕು, ಇನ್ನಷ್ಟು ವಿಸ್ತಾರಗೊಳಿಸಬೇಕು ಎಂಬ ಬೇಡಿಕೆಗಳಿಗೆ ವಿರುದ್ಧವಾಗಿ ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಸಂಕುಚಿತಗೊಳಿಸುವ ಹುನ್ನಾರ ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘಟನೆ ಸಂಚಾಲಕ ಎಚ್.ವಿ.ರೈ, ಸಾಲವನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲು ಆಸಕ್ತಿ ವಹಿಸುವುದರ ಬದಲು ಅನಗತ್ಯವಾಗಿ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದೆ. ಇದರಿಂದ ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯೇ ಅಪಾಯಕ್ಕೆ ಸಿಲುಕುವಂತಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.





