ಡಿ.28 ರಿಂದ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ
ಬೆಂಗಳೂರು, ಡಿ.26: ಅಖಿಲ ಹವ್ಯಕ ಮಹಾಸಭಾದ ವತಿಯಿಂದ ಸಭಾದ ಅಮೃತ ಮಹೋತ್ಸವ ಹಾಗೂ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನವನ್ನು ಡಿ.28 ರಿಂದ ಮೂರು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಗಿರಿಧರ್ ಖಜೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ವಿಶಿಷ್ಟವಾದ ಕೃಷಿ, ಕಲೆ, ಸಮಾಜ ಎದುರಿಸುತ್ತಿರುವ ಸಮಸ್ಯೆ ಹಾಗೂ ಅದಕ್ಕೆ ಪರಿಹಾರ ಸೇರಿದಂತೆ ವಿವಿಧ ಗೋಷ್ಠಿಗಳು ನಡೆಯಲಿವೆ. ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆ ಕಾರ್ಯಕ್ರಮಗಳೂ ಇರಲಿವೆ. ಜತೆಗೆ 75 ಪುಸ್ತಕಗಳ ಬಿಡುಗಡೆ, 75 ವೈದಿಕರಿಗೆ, 75 ಕೃಷಿಕರಿಗೆ, 75 ಸಾಧಕರಿಗೆ, 75 ವಿದ್ಯಾರ್ಥಿಗಳಿಗೆ, 75 ಹವ್ಯಕ ಯೋಧರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ರಾಘವೇಶ್ವರ ಭಾರತೀ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ್, ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಆರ್.ವಿ.ದೇಶಪಾಂಡೆ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಸೇರಿದಂತೆ ಮತ್ತಿತರರು ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದರು.





