ಮಂಗಳೂರು: ರೈತ ಸಂಘಟನೆಗಳಿಂದ ಪ್ರತಿಭಟನೆ
ಮಂಗಳೂರು, ಜ.3: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ವತಿಯಿಂದ ಜ.8ಮತ್ತು 9ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿ ದ.ಕ.ಜಿಲ್ಲೆಯ ವಿವಿಧ ರೈತ ಸಂಘಟನೆಗಳ ಆಶ್ರಯದಲ್ಲಿ ಗುರುವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯದರ್ಶಿ ರವಿಕಿರಣ ಪುಣಚ ಮಾತನಾಡಿ ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿಯ ಅನುಷ್ಠಾನ ಹಾಗೂ ದೇಶದ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ಕೇಂದ್ರ ಸರಕಾರ ಮೀನಮೇಷ ಎಣಿಸುತ್ತಿದೆ. ಅಖಿಲ ಭಾರತ ರೈತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕಳೆದ ನವೆಂಬರ್‌ನಲ್ಲಿ ಹೊಸದಿಲ್ಲಿಯಲ್ಲಿ ಪ್ರತಿಭಟನೆಗಳನ್ನು ನಡೆಸಲಾಗಿತ್ತು. ಆ ಚಳುವಳಿಯ ಬಳಿಕ ರೈತರು, ದುಡಿಯುವ ವರ್ಗ ಹಾಗೂ ಮಧ್ಯಮ ವರ್ಗದ ಜನತೆಯನ್ನು ಕೇಂದ್ರ ಸರಕಾರ ನಿರ್ಲಕ್ಷಿಸಿದೆ ಎಂದು ಆಪಾದಿಸಿದರು.
ಡಾ.ಎಂ.ಎಸ್.ಸ್ವಾಮಿನಾಥನ್ ಕೃಷಿ ಆಯೋಗದ ವರದಿಯ ಪ್ರಕಾರ ಕೃಷಿ ಉತ್ಪನ್ನಗಳ ವೆಚ್ಚಕ್ಕೆ ಶೇ.50ರಷ್ಟನ್ನು ಸೇರಿಸಿ ಸ್ಥಿರ ಬೆಲೆಯನ್ನು ಶಾಶ್ವತವಾಗಿ ನೀಡಬೇಕು. ಕೃಷಿ ಬಿಕ್ಕಟ್ಟಿನ ಕುರಿತು ವಿಶೇಷ ಸಂಸತ್ ಅಧಿವೇಶನ ಕರೆಯಬೇಕು. ದೇಶದ ಎಲ್ಲ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಮಾತ್ರವಲ್ಲದೆ, ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟಬೇಕು ಎಂದು ರವಿಕಿರಣ ಪುಣಚ ಆಗ್ರಹಿಸಿದರು.
ದೇಶಕ್ಕೆ ಅನ್ನ ನೀಡುವ ರೈತರನ್ನು ಮರೆತಿರುವ ಕೇಂದ್ರ ಸರಕಾರ ಉದ್ಯಮಿಗಳನ್ನು ಬೆಂಬಲಿಸುತ್ತಿದೆ. ರೈತರು, ದುಡಿಯುವ ವರ್ಗ, ಮಧ್ಯಮ ವರ್ಗ ನಿರ್ಲಕ್ಷಕ್ಕೆ ಒಳಗಾಗಿರುವುದು ಶೋಚನೀಯ ಸಂಗತಿ ಎಂದರು.
ಪ್ರತಿಭಟನೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮನೋಹರ ಶೆಟ್ಟಿ, ಜೆಡಿಎಸ್ ಕಿಸಾನ್ ಘಟಕದ ಕಾರ್ಯದರ್ಶಿ ರಾಮ್‌ಗಣೇಶ್, ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ, ಶ್ರೀಧರ ಶೆಟ್ಟಿ, ಉಮಾನಾಥ ಶೆಟ್ಟಿ, ಹರೀಶ್ ಕೊಟ್ಟಾರಿ ಮತ್ತಿತರರು ಪಾಲ್ಗೊಂಡಿದ್ದರು.