ಪುಟ್ಟರಂಗ ಶೆಟ್ಟಿ ರಾಜೀನಾಮೆ ನೀಡುವ ಅಗತ್ಯವಿಲ್ಲ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ. 6: ವಿಧಾನಸೌಧದಲ್ಲಿ ಟೈಪಿಸ್ಟ್ ಬಳಿ ಸಿಕ್ಕ ಹಣಕ್ಕೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿಗೂ ಯಾವುದೇ ಸಂಬಂಧವಿಲ್ಲ. ಹೀಗಿರವಾಗ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೋ ಹಣ ತೆಗೆದುಕೊಂಡು ಹೋದರೆ ಅದು ಸಚಿವ ಪುಟ್ಟರಂಗಶೆಟ್ಟಿಯವರಿಗೆ ಸೇರಿದ್ದು ಎನ್ನುವುದು ಸರಿಯಲ್ಲ. ಬಿಜೆಪಿ ಮುಖಂಡರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಆರೋಪ ಮಾಡುವುದಷ್ಟೇ ಗೊತ್ತು ಎಂದು ತಿರುಗೇಟು ನೀಡಿದರು.
ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚೆಕ್ ಮೂಲಕ ಲಂಚ ಸ್ವೀಕರಿಸಿದ್ದು, ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಏಕೆ ತನಿಖೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದ ಜನತೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂದು ಹೇಳಿದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿಗಳೇ ಇರಲಿದ್ದಾರೆ. ಯಾರಿಗೆ ಎಷ್ಟೇಷ್ಟು ಕ್ಷೇತ್ರಗಳೆಂಬ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಸಂಬಂಧ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಶಿವಕುಮಾರ್ ಹೇಳಿದರು.







