ಮಸಾಜ್ ಪಾರ್ಲರ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ

ಬೆಂಗಳೂರು, ಜ.24: ಹಣದ ಆಸೆಗೆ ಮಸಾಜ್ ಪಾರ್ಲರ್ ತೆರೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಅಬಿನ್ ಪೀಟರ್ ಹಾಗೂ ಜೋಬಿ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಜೆ.ಪಿ.ನಗರದ 6ನೇ ಹಂತ ನಂದಿನಿ ಹೊಟೇಲ್ ಹತ್ತಿರ ಮಸಾಜ್ ಪಾರ್ಲರ್ ತೆರದು ಅಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳು ಸುಲಭವಾಗಿ ಕಡಿಮೆ ಸಮಯದಲ್ಲಿ ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಬೇರೆ ರಾಜ್ಯದಿಂದ ಮಹಿಳೆಯರಿಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಮಾನವ ಕಳ್ಳ ಸಾಗಾಣಿಕೆ ಮಾಡಿಸಿಕೊಂಡು ಬಂದು ಹೆಚ್ಚು ಹಣ ಗಳಿಸುವ ಆಮಿಷ ತೋರಿಸಿ ಮಸಾಜ್ ಪಾರ್ಲರ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಿಕೊಂಡು, ಅಕ್ರಮವಾಗಿ ಹಣ ಸಂಪಾದನೆ ಮಾಡಿ ಜೀವನ ಸಾಗಿಸುತ್ತಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಸಿಸಿಬಿ ತಿಳಿಸಿದೆ.
ಬಂಧಿತರಿಂದ 7 ಸಾವಿರ ರೂ. ನಗದು, ಮೂರು ಮೊಬೈಲ್, ಸ್ವೈಪಿಂಗ್ ಮೆಷಿನ್ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಿ, ಇಲ್ಲಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.





