ಫೆ.10ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು, ಜ. 31: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಫೆ.10ಕ್ಕೆ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ನಡೆಯಲಿರುವ ಪಕ್ಷದ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿಳಿಸಿದ್ದಾರೆ.
ಫೆ.18ಕ್ಕೆ ಮತ್ತೊಂದು ಸಮಾವೇಶವನ್ನು (ಸ್ಥಳ ನಿಗದಿಪಡಿಸಿಲ್ಲ) ಏರ್ಪಡಿಸಲಿದ್ದೇವೆ. ಆ ಬಳಿಕ ಫೆಬ್ರವರಿ ಕೊನೆಯ ವಾರದಲ್ಲಿ ಇನ್ನೊಂದು ಸಮಾವೇಶವನ್ನು ನಡೆಸಲು ಉದ್ದೇಶಿಸಿದ್ದು, ಮೂರು ಸಮಾವೇಶದಲ್ಲಿ ಪ್ರಧಾನಿ ಮೋದಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಬಿಎಸ್‌ವೈ ಹೇಳಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆ.14 ಮತ್ತು 21ರಂದು ಕರ್ನಾಟಕ ರಾಜ್ಯಕ್ಕೆ ಆಗಮಿಸಲಿದ್ದಾರೆ. ಫೆ.28ರಂದು ‘ಮೇರಾ ಬೂತ್ ಸಬ್ ಸೇ ಮಜುಬೂತ್’ ಹಾಗೂ ಫೆ.26ಕ್ಕೆ ‘ಪ್ರತಿಯೊಬ್ಬರ ಮನೆಯಲ್ಲಿ ಕಮಲ ಜ್ಯೋತಿ’ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ಹೇಳಿದರು.
ಮಾರ್ಚ್ 2ರಂದು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ‘ಕಮಲ ಸಂಕಲ್ಪ’ ರ್ಯಾಲಿ ನಡೆಸಲಿದ್ದು, ಎಪ್ರಿಲ್ 15ರ ವರೆಗೆ ಪ್ರಧಾನಿ ಮೋದಿ, ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರು, ಹಿರಿಯ ಮುಖಂಡರು ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಪಕ್ಷದ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.







