ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ: ಸರಕಾರದ ಪರ ವಕೀಲರಿಂದ ಮಾಹಿತಿ
ಸ್ಥಳೀಯ ಸಂಸ್ಥೆಗಳ ಮೀಸಲಾತಿ ವಿವರ ಸಲ್ಲಿಸಲು ಆದೇಶಿಸಿದ ವಿಚಾರ
ಬೆಂಗಳೂರು, ಜ.31: ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 13 ನಗರ ಸ್ಥಳೀಯ ಸಂಸ್ಥೆಗಳಿಗೆ ಎರಡು ದಿನದಲ್ಲಿ ವಾರ್ಡ್‌ವಾರು ಮೀಸಲು ಮರುನಿಗದಿಪಡಿಸಲು ಸೂಚಿಸಿ ಏಕಸದಸ್ಯ ಪೀಠ ಹೊರಡಿಸಿದ್ದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಹೈಕೋರ್ಟ್‌ಗೆ ಸರಕಾರದ ಪರ ವಕೀಲರು ಮಾಹಿತಿ ನೀಡಿದರು.
ಇದೇ ಮಾರ್ಚ್‌ನಲ್ಲಿ ಅವಧಿ ಪೂರ್ಣಗೊಳ್ಳಲಿರುವ ರಾಜ್ಯದ 101 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 13 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಅಧಿಸೂಚನೆಯನ್ನು ರದ್ದುಪಡಿಸಿ ಜ.14ರಂದು ಆದೇಶ ಹೊರಡಿಸಿದ್ದ ಹೈಕೋರ್ಟ್, ಈ 13 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿಯನ್ನು ಮರುನಿಗದಿಗೊಳಿಸಿ ವಿವರಗಳನ್ನು ಜ.28ರೊಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತ್ತು.
ಆದರೆ, ರಾಜ್ಯ ಸರಕಾರ ಇಲ್ಲಿಯತನಕ ಪರಿಷ್ಕೃತ ಮೀಸಲಾತಿ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ರಾಜ್ಯ ಚುನಾವಣಾ ಆಯೋಗ, ಇನ್ನೆರಡು ದಿನಗಳಲ್ಲಿ ಪಟ್ಟಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕ್ಕೆ ನಿರ್ದೇಶನ ನೀಡಬೇಕು. ಸಮಯ ಬಹಳ ಕಡಿಮೆ ಇರುವುದರಿಂದ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಕಷ್ಟವಾಗಲಿದೆ. ಅಲ್ಲದೇ ಲೋಕಸಭೆ ಚುನಾವಣೆ, ಎಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳು ಸನಿಹದಲ್ಲಿವೆ ಎಂದು ಆಯೋಗ ಮಧ್ಯಂತರ ಅರ್ಜಿಯಲ್ಲಿ ಹೇಳಿಕೊಂಡಿತ್ತು. ಆದರೆ, ಗುರುವಾರ ಸರಕಾರದ ಪರ ವಕೀಲರು, ಎರಡು ದಿನದಲ್ಲಿ ವಾರ್ಡ್‌ವಾರು ಮೀಸಲು ಮರುನಿಗದಿಪಡಿಸಲು ಸೂಚಿಸಿ ಏಕಸದಸ್ಯ ಪೀಠ ಹೊರಡಿಸಿದ್ದ ತೀರ್ಪನ್ನು ಪ್ರಶ್ನಿಸಿ ಈಗಾಗಲೇ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಹೈಕೋರ್ಟ್ ಪೀಠಕ್ಕೆ ತಿಳಿಸಿದರು. ಸದ್ಯದಲ್ಲಿಯೇ ಮೇಲ್ಮನವಿ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.







