ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಕಾರು; ಮೂವರು ಮೃತ್ಯು

ಬೆಂಗಳೂರು, ಫೆ.5: ಧರ್ಮಸ್ಥಳ ಮಾರ್ಗವಾಗಿ ಬೆಂಗಳೂರಿಗೆ ಹಿಂದಿರುಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಇಲ್ಲಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಮೃತಪಟ್ಟವರ ಪೈಕಿ ಒಬ್ಬರನ್ನು ಜನದೇಶ ಪ್ರಸಾದ್(40) ಎಂದು ಗುರುತಿಸಲಾಗಿದ್ದು, ಇನ್ನಿಬ್ಬರ ಮಾಹಿತಿ ತಿಳಿದುಬಂದಿಲ್ಲ. ಘಟನೆಯಲ್ಲಿ ಒಬ್ಬಾತ ಗಂಭೀರ ಗಾಯಗೊಂಡಿದ್ದು, ನೆಲಮಂಗಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಏನಿದು ಘಟನೆ?: ಕಾರಿನಲ್ಲಿ ನಾಲ್ವರು ಧರ್ಮಸ್ಥಳಕ್ಕೆ ಹೋಗಿದ್ದು, ಮಂಗಳವಾರ ಬೆಳಗಿನ ಜಾವ ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ಮಾರ್ಗಮಧ್ಯೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ರಾಯರಪಾಳ್ಯ ಗ್ರಾಮ, ರಾಷ್ಟ್ರೀಯ ಹೆದ್ದಾರಿ 75ರ ಲಕ್ಕೇನಹಳ್ಳಿ ಗೇಟ್ ಬಳಿ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಕುದೂರು ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತರ ಮಾಹಿತಿ ಕಲೆಹಾಕುತ್ತಿದ್ದಾರೆ.







