ಡಿಸಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ

ಬೆಂಗಳೂರು, ಫೆ.5: ಹಾಸನ ನಗರದ ಬಿ.ಎಂ ರಸ್ತೆ ವಿಸ್ತರಣೆ ಪ್ರಶ್ನಿಸಿದ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ದೂರಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ನಗರಸಭೆ ಆಯುಕ್ತ ಬಿ.ಎ.ಪರಮೇಶ್ವರಪ್ಪಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಹಾಸನದ ಸುಧಾ ಮತ್ತು ಆರ್.ರಂಗಸ್ವಾಮಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ರವಿ ಮಳಿಮಠ ಮತ್ತು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಕಟ್ಟಡಗಳ ತೆರವಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಹಾಸನದ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಯುಕ್ತರು ಜನವರಿ 27ರಂದು ಖುದ್ದು ಆಲಿಸಿ ನಂತರ ತೀರ್ಮಾನ ಕೈಗೊಳ್ಳಬೇಕು ಎಂದು ಹೈಕೋರ್ಟ್ 2018ರ ಡಿಸೆಂಬರ್ 20ರಂದು ಆದೇಶಿಸಿತ್ತು. ಆದರೆ, ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಯುಕ್ತರು ಹೈಕೋರ್ಟ್ ಆದೇಶ ಪಾಲನೆ ಮಾಡಿಲ್ಲ. ಹೀಗಾಗಿ, ಅವರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.





