ಯುವ ವಕೀಲೆ ಧರಣಿ ಆತ್ಮಹತ್ಯೆ ಪ್ರಕರಣ: ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಹೈಕೋರ್ಟ್

ಬೆಂಗಳೂರು, ಫೆ.6: ಯುವ ವಕೀಲೆ ಧರಣಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಬೆಂಗಳೂರು ವಕೀಲರ ಸಂಘವು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿತು. ಕಳೆದ 2018ರ ಡಿ.31ರಂದು ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವ ವಕೀಲೆ ಧರಣಿ ಆತ್ಮಹತ್ಯೆಗೆ ಶರಣಾಗಿದ್ದರು. ಆಕೆ ಸಾವಿಗೆ ಎ.ನಾರಾಯಣಪುರ ವಾರ್ಡ್‌ನ ಬಿಬಿಎಂಪಿ ಸದಸ್ಯ ವಿ.ಸುರೇಶ್ ಕಾರಣ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಧರಣಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ನೀಡಬೇಕು. ಆರೋಪಿಗಳನ್ನು ಬಂಧಿಸದ ಡಿಸಿಪಿ, ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನು ಅಮಾನತು ಮಾಡಬೇಕು ಹಾಗೂ ಧರಣಿ ಕುಟುಂಬಕ್ಕೆ 50 ಲಕ್ಷ ರೂ.ಪರಿಹಾರ ನೀಡಬೇಕೆಂದು ನಗರದ ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಸ್ಟೀಸ್ ಕಮಿಟಿ ಫಾರ್ ಅಡ್ವೊಕೇಟ್ ಸಂಘದ ವಕೀಲರೂ ಪ್ರತಿಭಟನೆಯನ್ನೂ ನಡೆಸಿದ್ದರು.





