ಬೆಳಗಾವಿ: ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ

ಬೆಳಗಾವಿ, ಫೆ.9: ಸರಕಾರದ ಈ ಮಹತ್ವಾಂಕ್ಷೆಯ ಯೋಜನೆಯಡಿಯಲ್ಲಿ 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಜಂತು ನಿವಾರಣಾ ಮಾತ್ರೆಯನ್ನು ನೀಡುವುದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣೆಗೆ, ಕಲಿಕಾ ಸಾಮರ್ಥ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗೋರಲ್ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲೆಯ ಯಳ್ಳೂರದಲ್ಲಿರುವ ಸರಕಾರಿ ಮಾದರಿ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಇನ್ನಿತರರ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನವನ್ನು ಮಕ್ಕಳಿಗೆ ಜಂತು ಮಾತ್ರೆಗಳನ್ನು ನುಂಗಿಸಿ ಮೂಲಕ ಅವರು ಚಾಲನೆ ನೀಡಿದರು.
ಈ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಪ್ಪಾಸಾಹೇಬ ನರಟ್ಟಿ, ಮಕ್ಕಳಿಗೆ ಮನೆಯೇ ಮೊದಲು ಪಾಠಶಾಲೆಯಾಗಿದ್ದು, ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮಹತ್ವದ್ದಾಗಿರುತ್ತದೆ ಎಂದರು.
ಮಕ್ಕಳು ಶಾಲೆಗೆ ಸೇರಿದ ನಂತರ ಅಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಾಗಿರುತ್ತದೆ. ಅದರಂತೆ ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಬಾಲ ಸ್ವಾಸ್ಥ ಕಾರ್ಯಕ್ರಮದಡಿಯಲ್ಲಿ ಅಂಗನವಾಡಿ ಹಾಗೂ ಶಾಲೆಗಳಲ್ಲಿನ 0-19 ವರ್ಷದ ಮಕ್ಕಳ ತಪಾಸಣೆ ಮಾಡಿ, ಪತ್ತೆ ಹಚ್ಚಿದ ನ್ಯೂನತೆಗಳಿಗೆ ಉಚಿತ ವೈದ್ಯಕೀಯ ಮತ್ತು ಶಸ್ತ್ರ ಚಿಕಿತ್ಸೆ ಮೂಲಕ ಗುಣಪಡಿಸಿ ಮಕ್ಕಳ ಆರೋಗ್ಯ ಮಟ್ಟವನ್ನು ಹೆಚ್ಚಿಸಲಾಗುತ್ತದೆ ಎಂದು ಅವರು ಹೇಳಿದರು.
ಅದರಂತೆ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಡಿಯಲ್ಲಿ ಮಕ್ಕಳ ಕುಂಠಿತ ಬೆಳವಣಿಗೆಗೆ ಕಾರಣವಾಗುವ ಜಂತು ನಾಶಕ್ಕಾಗಿ ಮಕ್ಕಳಿಗೆ ಮಾತ್ರೆಗಳನ್ನು ನೀಡಲಾಗುತ್ತದೆ. ಇದಕ್ಕೆ ಶಿಕ್ಷಕರು ಮತ್ತು ಪಾಲಕರು ಸಹಕಾರ ನೀಡಬೇಕೆಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯ ರಾವಜಿ ಪಾಟೀಲ್, ಯಳ್ಳೂರ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನುಸೂಯಾ ಪರೀಟ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







