ಎಸ್.ಮೂರ್ತಿ ಅಮಾನತು ಪ್ರಕರಣ: ವಿಧಾನಸಭಾಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ

ಎಸ್.ಮೂರ್ತಿ
ಬೆಂಗಳೂರು, ಫೆ.12: ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ನನ್ನನ್ನು ಅಮಾನತುಗೊಳಿಸಿ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಕೋರಿರುವ ಎಸ್.ಮೂರ್ತಿ ಅರ್ಜಿಗೆ ಸಂಬಂಧಿಸಿದಂತೆ ವಿಧಾನಸಭಾಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ, ಪ್ರತಿವಾದಿಗಳಾದ ವಿಧಾನಸಭೆಯ ಹಂಗಾಮಿ ಕಾರ್ಯದರ್ಶಿ ಮತ್ತು ಸಂಸದೀಯ ವಿಶೇಷ ಮಂಡಳಿಗೂ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ. ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಲಾಗಿದೆ.
ಪ್ರಕರಣವೇನು: ವಿಧಾನಸಭೆ ಕಾರ್ಯದರ್ಶಿಯಾಗಿದ್ದ ಎಸ್.ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಿ ವಿಧಾನಸಭೆ ಅಧೀನ ಕಾರ್ಯದರ್ಶಿ 2018ರ ಡಿಸೆಂಬರ್ 27ರಂದು ಆದೇಶ ಹೊರಡಿಸಿದ್ದರು.
2016 ಹಾಗೂ 2017ನೆ ಸಾಲಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿರುವ ಶಾಸಕಾಂಗದ ವಿಶೇಷ ಮಂಡಳಿಯ ಆದೇಶದ ಅನುಸಾರ ಎಸ್.ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಅರ್ಜಿದಾರ ಮೂರ್ತಿ ಪರ ಪ್ರಮೋದ್ ಎನ್ ಕಥಾವಿ ಹಾಜರಾಗಿದ್ದರು.







