ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಮೈತ್ರಿ ಸರ್ಕಾರದ ಆದ್ಯತೆ: ಸಿಎಂ ಕುಮಾರಸ್ವಾಮಿ

ಹಾಸನ,ಫೆ.27: ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಮೈತ್ರಿ ಸರ್ಕಾರದ ಆದ್ಯತೆಯಾಗಿದ್ದು, ಅದಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವುದಾಗಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಅರಸೀಕೆರೆ ತಾಲೂಕು ಕ್ರೀಡಾಂಗಣದಲ್ಲಿಂದು 300 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನರೆವೇರಿಸಿ ಅವರು ಮಾತನಾಡಿದರು. ರಾಜ್ಯದ ಪ್ರತಿ ಗ್ರಾಮವೂ ವಿಕಾಸವಾಗಬೇಕು, ಕೃಷಿಕರ ಜೀವನ ಮಟ್ಟ ಸುಧಾರಣೆಯಾಗಬೇಕು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಪೂರೈಕೆಯಲ್ಲಿ ಸುಧಾರಣೆಯಾಗಬೇಕು. ಆ ನಿಟ್ಟಿನಲ್ಲಿ ಸರ್ಕಾರ ಹತ್ತಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತಂದಿದೆ.
ರೈತರ ಸಂಕಷ್ಟಕ್ಕೆ ನೆರವಾಗುವ ದೃಷ್ಟಿಯಿಂದ ರಾಜ್ಯದಲ್ಲಿ 45,000 ಕೋಟಿ ರೂ. ರೈತರ ಸಾಲಮನ್ನಾ ಮಾಡಲಾಗಿದ್ದು, ವಾಣಿಜ್ಯ ಹಾಗೂ ಸಹಕಾರ ಬ್ಯಾಂಕ್‍ಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಜೊತೆಗೆ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡಲಾಗುವುದು ಎಂದರು.
ಅರಸೀಕೆರೆ, ಚನ್ನರಾಯಪಟ್ಟಣ ಸೇರಿದಂತೆ ರಾಜ್ಯದ ವಿವಿದೆಡೆ ತೆಂಗು ಬೆಳೆ ಹಾನಿ ಸಂಭವಿಸಿದ್ದು ಅದಕ್ಕೆ ಪ್ರತಿ ಮರಕ್ಕೆ 400ರೂಪಾಯಿಗಳಂತೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಜೊತೆಗೆ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿ ಮರಕ್ಕೆ 800 ರೂ. ಗಳಂತೆ ಪುನರ್ ಬೇಸಾಯಕ್ಕೆ ನೆರವು ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಅರಸೀಕೆರೆ ಕ್ಷೇತ್ರದ ಶಾಸಕರು ಹಾಗೂ ಗೃಹಮಂಡಳಿಯ ಅಧ್ಯಕ್ಷರಾದ ಕೆ.ಎಂ.ಶಿವಲಿಂಗೇಗೌಡ ಅವರು ಕ್ಷೇತ್ರದಲ್ಲಿ ಕಳೆದ 8 ತಿಂಗಳಲ್ಲಿ ಆಗಿರುವ ಅಭಿವೃದ್ಧಿ ಮತ್ತು ಮುಂದೆ ಆಗಬೇಕಿರುವ ಕಾಮಗಾರಿಗಳ ಬಗ್ಗೆ ವಿವರಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ. ರೇವಣ್ಣ, ಶಾಸಕರಾದ ಸಿ.ಎನ್. ಬಾಲಕೃಷ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತಾ ದೇವರಾಜ್ ಸೇರಿದಂತೆ ಅನೇಕರು ಹಾಜರಿದ್ದರು.







