ಮಾ.6: ರೈತರಿಗೆ ಕೃಷಿ ಪ್ರಶಸ್ತಿ ಪ್ರದಾನ
ಬೆಂಗಳೂರು, ಮಾ. 2: ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಹಾಗೂ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಪಂಡಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ರೈತರಲ್ಲಿ ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಉಂಟುಮಾಡಿ ಅತಿಹೆಚ್ಚು ಬೆಳೆ ಇಳುವರಿ ಪಡೆದು, ಕೃಷಿ ಉತ್ಪಾದಕತೆ ಹೆಚ್ಚಳಕ್ಕೆ ಉತ್ತೇಜನವಾಗಿರುವ ರೈತರಿಗೆ ‘ಕೃಷಿ ಪ್ರಶಸ್ತಿ’ಯನ್ನು ಪ್ರದಾನ ಮಾಡಿ ಗೌರವಿಸಲಾಗುತ್ತದೆ.
ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ಹಾಗೂ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ.6ರ ಬುಧವಾರ ಬೆಳಗ್ಗೆ 11.30ಕ್ಕೆ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಏರ್ಪಡಿಸಲಾಗಿದೆ. ಈ ಸಮಾರಂಭದಲ್ಲಿ 2016-17 ಹಾಗೂ 2017-18ನೆ ಸಾಲಿನ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಗುತ್ತದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾರಂಭ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಶಿವಾಜಿನಗರ ಕ್ಷೇತ್ರದ ಶಾಸಕ ಆರ್.ರೋಷನ್ ಬೇಗ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವರಾದ ಎನ್.ಎಚ್. ಶಿವಶಂಕರರೆಡ್ಡಿ, ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ, ಎಂ.ಸಿ. ಮನಗುಳಿ, ಸಾ.ರಾ.ಮಹೇಶ್, ಸತೀಶ್ ಜಾರಕಿಹೊಳಿ, ಸಂಸದ ಪಿ.ಸಿ.ಮೋಹನ್ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ 7 ಕೃಷಿ ಪಂಡಿತರನ್ನು ಹಾಗೂ 14 ಕೃಷಿ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಗುವುದು. ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ರೈತ ಬಾಂಧವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.