ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು, ಮಾ.12: ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಮತದಾರರ ಹೆಸರನ್ನು ಕೈ ಬಿಡಲಾಗಿದ್ದು, ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದರೆ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಮಂಗಳವಾರ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನೇತೃತ್ವದ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು.
ಮನೆಗಳ ಮೇಲೆ ರಾಜಕೀಯ ಪಕ್ಷಗಳ ಬಾವುಟ ಅಳವಡಿಕೆ, ಸಾಮಾಜಿಕ ಜಾಲ ತಾಣಗಳ ನಿರ್ವಹಣೆ ಸೇರಿದಂತೆ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಅನೇಕ ಗೊಂದಲಗಳಿದ್ದು, ಈ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ನಿಯೋಗವು ಮನವಿ ಸಲ್ಲಿಸಿತು.
ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ ಸಲ್ಲಿಸುವ ನಾಗರಿಕರಿಗೆ ಅಧಿಕಾರಿಗಳು ಅನಗತ್ಯವಾಗಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಆದುದರಿಂದ, ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಸ್ಪಷ್ಟವಾದ ಸೂಚನೆಗಳನ್ನು ನೀಡಬೇಕು. ಅಲ್ಲದೇ, ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಬೇಕು ಎಂದು ನಿಯೋಗ ಕೋರಿತು.
ನಿಯೋಗದಲ್ಲಿ ಬಿಜೆಪಿ ಮುಖಂಡರಾದ ಎಸ್.ಪ್ರಕಾಶ್, ದತ್ತಗುರು ಹೆಗಡೆ, ಎ.ಎಚ್.ಆನಂದ, ಎಸ್.ಹರೀಶ್ ಹಾಗೂ ಶ್ರೀ ಗಣೇಶ್ ಉಪಸ್ಥಿತರಿದ್ದರು.







