ಲೋಕಸಭಾ ಚುನಾವಣೆಯಲ್ಲಿ ಬಿಜೆಡಿ ಸ್ವತಂತ್ರ ಸ್ಪರ್ಧೆ: ನವೀನ್ ಪಟ್ನಾಯಕ್

ಭುವನೇಶ್ವರ,ಮಾ.12: ಮುಂದಿನ ಲೋಕಸಭಾ ಮತ್ತು ವಿಧಾನ ಸಭಾ ಚುನಾವಣೆಯನ್ನು ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಬಿಜು ಜನತಾದಳ ಅಧ್ಯಕ್ಷ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮಂಗಳವಾರ ತಿಳಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಹಾಗೂ ಅವುಗಳು ಮುನ್ನಡೆಸುವ ಮೈತ್ರಿಕೂಟದಿಂದ ದೂರ ಉಳಿಯುವ ಪಕ್ಷದ ನಿಯಮಕ್ಕೆ ಅನುಸಾರವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯದ ಆಧಾರದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಪಟ್ನಾಯಕ್ ತಿಳಿಸಿದ್ದಾರೆ. ಲೋಕಸಭೆ ಮತ್ತು ವಿಧಾನ ಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಪಟ್ನಾಯಕ್ ತಿಳಿಸಿದ್ದಾರೆ.
ಬಿಜೆಡಿ ರಾಜ್ಯದ ಎಲ್ಲ 21 ಲೋಕಸಭಾ ಕ್ಷೇತ್ರಗಳು ಮತ್ತು 147 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈ ಚುನಾವಣೆಗಳಲ್ಲಿ ಪಕ್ಷವು ಉತ್ತಮ ನಿರ್ವಹಣೆ ತೋರಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ. 2014 ಲೋಕಸಭಾ ಚುನಾವಣೆಯಲ್ಲಿ ಬಿಜೆಡಿ ರಾಜ್ಯದ 21 ಸ್ಥಾನಗಳ ಪೈಕಿ 20 ಸ್ಥಾನಗಳಲ್ಲಿ ಮತ್ತು ವಿಧಾನ ಸಭಾ ಚುನಾವಣೆಯಲ್ಲಿ 147 ಸ್ಥಾನಗಳ ಪೈಕಿ 117 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೇರಿತ್ತು.





