ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ: ಪೊಲೀಸ್ ಆಯುಕ್ತ ಸುನೀಲ್ ಕುಮಾರ್
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 3 ಚೆಕ್‌ಪೋಸ್ಟ್ ರಚನೆ
ಬೆಂಗಳೂರು, ಮಾ.16: ಲೋಕಸಭಾ ಚುನಾವಣೆ ಘೋಷಣೆಯ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡುವ ಉದ್ದೇಶದಿಂದ ನಗರ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಮೂರು ಚೆಕ್ ಪೋಸ್ಟ್‌ಗಳು, ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ರಚನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ನಡೆಯುವ ಅಕ್ರಮಗಳ ಮೇಲೆ ಕಣ್ಣಿಡಲು ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಗರಕ್ಕೆ ಈಗಾಗಲೇ ಕೇಂದ್ರ ಮೀಸಲು ಪಡೆಯ ತುಕಡಿಯೊಂದು ಬಂದಿದೆ. ಇಂದಿನಿಂದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಥ ಸಂಚಲನ ನಡೆಸಲಾಗುತ್ತದೆ ಎಂದು ಹೇಳಿದರು.
ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳು ಅಲ್ಲದೆ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಬರಲಿವೆ. ದಕ್ಷಿಣ ವಿಭಾಗಕ್ಕೆ ಅಣ್ಣಾಮಲೈ, ಕೇಂದ್ರಕ್ಕೆ ರಾಹುಲ್ ಕುಮಾರ್, ಉತ್ತರಕ್ಕೆ ಶಶಿಕುಮಾರ್, ಚಿಕ್ಕಬಳ್ಳಾಪುರಕ್ಕೆ ಕಲಾಕೃಷ್ಣಸ್ವಾಮಿ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಇಶಾಪಂಥ್‌ರನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಚುನಾವಣಾಧಿಕಾರಿಗಳಾಗಿ ವಿಜಯ್ ಶಂಕರ್ ನಕುಲ್ ಲೋಕೇಶ್ ಅವರು ಕಾರ್ಯ ನಿರ್ವಹಿಸುತ್ತಿದ್ದು, ಅವರ ಜೊತೆ ನಗರದ ಎಲ್ಲಾ ಎಸಿಪಿಗಳು, ಚುನಾವಣಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಅಲ್ಪಸಂಖ್ಯಾತರು, ದಲಿತರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಗುರುತಿಸಿ, ಅಲ್ಲಿನ ಭದ್ರತೆಯನ್ನು ಬಿಗಿಗೊಳಿಸಿ ಮತದಾರರಿಗೆ ಆಮಿಷ ಒಡ್ಡುವುದು, ಶಾಂತಿಗೆ ಭಂಗ ತರುವುದು, ಇನ್ನಿತರ ಚುನಾವಣಾ ಅಕ್ರಮಗಳ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.
ನಗರದಲ್ಲಿ ಸುಮಾರು 7,900 ಪರವಾನಿಗೆ ಪಡೆದ ಶಸ್ತ್ರಾಸ್ತ್ರಗಳಿದ್ದು, ಅದರಲ್ಲಿ ಈಗಾಗಲೇ 2 ಸಾವಿರ ಶಸ್ತ್ರಾಸ್ತ್ರಗಳನ್ನು ಜಮಾಮಾಡಿಕೊಳ್ಳಲಾಗಿದೆ. ನಿವೃತ್ತ ಪೊಲೀಸ್ ಅಧಿಕಾರಿಗಳು, ಸೇನಾಧಿಕಾರಿಗಳು, ಬ್ಯಾಂಕ್‌ಗಳ ಭದ್ರತಾಧಿಕಾರಿಗಳು ಸೇರಿದಂತೆ, ಅತಿ ಅಗತ್ಯವೆನಿಸಿದ ವ್ಯಕ್ತಿಗಳಿಗೆ ಷರತ್ತುಗಳೊಂದಿಗೆ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳಲು ಅವಕಾಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಶಸ್ತ್ರಾಸ್ತ್ರ ಪರವಾನಿಗೆ ಹೊಂದಿದವರಿಗೆ ಈಗಾಗಲೇ ಶಸ್ತ್ರಾಸ್ತ್ರಗಳನ್ನು ಠಾಣೆಗೆ ಜಮಾ ಮಾಡುವಂತೆ ಸೂಚಿಸಲಾಗಿದೆ. ಜಮಾ ಮಾಡದೆ ಮುಂದುವರೆಯುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಚುನಾವಣೆಯ ಹಿನ್ನೆಲೆಯಲ್ಲಿ ನಗರದಲ್ಲಿನ ಸುಮಾರು 8 ಸಾವಿರ ರೌಡಿಗಳನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡು ಓಡಾಡುತ್ತಿರುವ ಅಪರಾಧಿಗಳು, ರೌಡಿ ಚಟುವಟಿಕೆಗಳಲ್ಲಿ ತೊಡಗಿರುವವರು, ಹಳೆ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಆಯಾ ಡಿಸಿಪಿಗಳಿಗೆ ನೀಡಲಾಗಿದೆ ಎಂದು ಅವರು ವಿವರಿಸಿದರು.