ಸುಮಲತಾಗೆ ಬೆಂಬಲ ಘೋಷಿಸಿದ ಕಾಂಗ್ರೆಸ್ ಮಾಜಿ ಶಾಸಕ ಎಚ್.ಬಿ.ರಾಮು

ಮಂಡ್ಯ, ಮಾ.27: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಮಾಜಿ ಶಾಸಕ ಎಚ್.ಬಿ.ರಾಮು ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿದ್ದು, ಇದುವರೆಗೆ ನಡೆದ ಚುನಾವಣೆಗಳಲ್ಲಿ ಜಿಲ್ಲೆಯ ಜನತೆ ವಿಧವೆಯರನ್ನು ಕೈಬಿಟ್ಟವರಲ್ಲವೆಂದು ಪ್ರತಿಪಾದಿಸಿದ್ದಾರೆ.
ಲೋಕಸಭೆ ಚುನಾವಣೆ ಆರಂಭವಾದ ನಂತರ ಮೈತ್ರಿ ಧರ್ಮದ ವಿರುದ್ಧ ಬಹಿರಂಗವಾಗಿ ಕಾಣಿಸಿಕೊಂಡ ಮೊದಲ ಮಾಜಿ ಶಾಸಕನೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅವರು, ಆತ್ಮಸಾಕ್ಷಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಘೋಷಿಸಿದ್ದಾರೆ.
ಹೊರ ಜಿಲ್ಲೆಯ ಅಭ್ಯರ್ಥಿಯೊಬ್ಬರು ಪ್ರಬಲ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿರುವುದರಿಂದ ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದೆ. ಆದ್ದರಿಂದ ಮುಕ್ತ ಚುನಾವಣೆ ನಡೆಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಎಚ್.ಬಿ.ರಾಮು ಒತ್ತಾಯಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಬೇಕಾದರೆ ಅಂಬರೀಷ್ ಅವರ ಪಾತ್ರವೂ ಇತ್ತು. ಇದನ್ನು ಮೈತ್ರಿ ಪಕ್ಷಗಳ ನಾಯಕರು ಅರಿಯಬೇಕು ಎಂದು ಅವರು ಸಲಹೆ ನೀಡಿದರು.
ಎಸ್.ಡಿ. ಜಯರಾಂ ಅವರು ನನ್ನಂತಹ ಹಲವರಿಗೆ ರಾಜಕೀಯದಲ್ಲಿ ಅವಕಾಶ ಕೊಟ್ಟಿದ್ದಾರೆ. ಆತ್ಮಸಾಕ್ಷಿಗಾಗಿ ಚುನಾವಣೆ ಮಾಡುತ್ತೇವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸೊಸೆಯಾದ ಸುಮಲತಾ ಅಂಬರೀಷ್ ಅವರಿಗೆ ಕಾಂಗ್ರೆಸ್ಸಿಗರಾದ ನಮ್ಮ ಬೆಂಬಲ ನೀಡುತ್ತಿದ್ದೇವೆ ಎಂದು ಅವರು ತಿಳಿಸಿದರು.
ಜಿಪಂ ಮಾಜಿ ಸದಸ್ಯ ಜಿ.ಸಿ.ಆನಂದ್, ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಮನ್‍ಮುಲ್ ನಿರ್ದೇಶಕರಾದ ಬಿ.ಚಂದ್ರು, ಎಸ್.ಪಿ. ಮಹೇಶ್, ಪ್ರಕಾಶ್, ಕುಳ್ಳೇಗೌಡ, ಮುಖಂಡ ಕಂಬದಹಳ್ಳಿ ಪುಟ್ಟಸ್ವಾಮಿ ಉಪಸ್ಥಿತರಿದ್ದರು.







