ಸ್ಪರ್ಧೆಗೆ ಶಿವಶಂಕರಪ್ಪ ನಕಾರ: ದಾವಣಗೆರೆ ಕ್ಷೇತ್ರ ಮೈತ್ರಿ ಅಭ್ಯರ್ಥಿಯಾಗಿ ಎಸ್.ಎಸ್.ಮಲ್ಲಿಕಾರ್ಜುನ್
ಅಪ್ಪನ ಬದಲಿಗೆ ಮಗನಿಗೆ ಟಿಕೆಟ್ ನೀಡಿದ ಕಾಂಗ್ರೆಸ್

ಶಾಮನೂರು ಶಿವಶಂಕರಪ್ಪ -ಎಸ್.ಎಸ್.ಮಲ್ಲಿಕಾರ್ಜುನ್
ದಾವಣಗೆರೆ,ಮಾ.29: ದಾವಣಗೆರೆ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ ಸ್ಪರ್ಧೆಗೆ ನಿರಾಸಕ್ತಿ ತೋರಿದ್ದರಿಂದ ಕಗ್ಗಂಟಾಗಿದ್ದ ಅಭ್ಯರ್ಥಿ ಆಯ್ಕೆ ಫೈನಲ್ ಆಗಿದ್ದು, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಎಐಸಿಸಿ ಪ್ರಕಟಿಸಿದ್ದ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ದಾವಣಗೆರೆ ಲೋಕಸಭೆ ಕ್ಷೇತ್ರ ಅಭ್ಯರ್ಥಿಯಾಗಿ ಶಾಸಕ ಶಾಮನೂರು ಶಿವಶಂಕರಪ್ಪರಿಗೆ ಟಿಕೆಟ್ ನೀಡಿತ್ತು. ಆದರೆ ನನಗೆ ಬಿ-ಫಾರಂ ಬೇಡ ಎಂದು ಹೇಳಿದ್ದ ಶಿವಶಂಕರಪ್ಪ ಅವರು ಸ್ಪರ್ಧೆಗೆ ನಿರಾಸಕ್ತಿ ತೋರಿದ್ದರು. ಹೀಗಾಗಿ ಇಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ ಮೇರೆಗೆ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಹೈಕಮಾಂಡ್ ಟಿಕೆಟ್ ನೀಡಿದೆ.
ಮೈತ್ರಿ ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಶಾಮನೂರು ಶಿವಶಂಕರಪ್ಪ ಅವರು, ಮಂತ್ರಿಸ್ಥಾನ ನೀಡದ್ದಕ್ಕೆ ನನಗೆ ಬೇಸರವಿದೆ. ಅದಕ್ಕಾಗಿ ನನಗೆ ಬಿ ಫಾರಂ ಬೇಡ ಎಂದು ಹೇಳಿದ್ದೇನೆ. ನಾನು ಯಾರ ಹೆಸರನ್ನು ಸೂಚಿಸಿಲ್ಲ ಹಾಗೂ ಪುತ್ರ ಎಸ್.ಎಸ್ ಮಲ್ಲಿಕಾರ್ಜುನ್ ಸ್ಪರ್ಧೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು.





