ಎ.8 ರಿಂದ ರಾಜ್ಯದ ಆರು ಕಡೆ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಬೆಂಗಳೂರು, ಎ. 2: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಎ.8ರಿಂದ ರಾಜ್ಯದ ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಮಂಗಳವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.8ರಂದು ಚಿತ್ರದುರ್ಗದಲ್ಲಿ ಅದೇ ದಿನ ಮಧ್ಯಾಹ್ನ ಮೈಸೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಎ.13ಕ್ಕೆ ಮಂಗಳೂರು, ಅದೇ ದಿನ ಸಂಜೆ ಬೆಂಗಳೂರಿನಲ್ಲಿ, ಎ.18ರಂದು ಚಿಕ್ಕೋಡಿ ಮತ್ತು ರಾಯಚೂರು ಜಿಲ್ಲೆ ಗಂಗಾವತಿಯಲ್ಲಿ ಮೋದಿ ಭಾಷಣ ಮಾಡಲಿದ್ದಾರೆ.
ಅಮಿತ್ ಶಾ: ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಎ.10, 12, 17 ಮತ್ತು 20ರಂದು ದಾವಣಗೆರೆ, ಹಾಸನ, ತುಮಕೂರು, ಕೋಲಾರ, ಕಲಬುರಗಿ, ವಿಜಯಪುರ, ಧಾರವಾಡ ಮತ್ತು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎ.15ರಂದು ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ, ಎ.21ರಂದು ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಲಿಂಬಾವಳಿ ವಿವರಿಸಿದರು.







