ಸಚಿವ ಜಿ.ಟಿ.ದೇವೇಗೌಡ ಕಾರಿಗೆ ಲಾರಿ ಢಿಕ್ಕಿ

ಮೈಸೂರು,ಏ.2: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಇಂದು ಬೆಳಗ್ಗೆ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಸಚಿವ ಜಿ.ಟಿ.ದೇವೇಗೌಡರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದು ಮಂಡ್ಯಕ್ಕೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರಕ್ಕೆ ತೆರಳುತ್ತಿದ್ದರು. ಈ ಸಂದರ್ಭ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಕೊಲಂಬಿಯಾ ಏಷ್ಯಾ ಆಸ್ಪತ್ರೆ ಬಳಿ ಇರುವ ರಿಂಗ್ ರಸ್ತೆಯಲ್ಲಿ ಎದುರಿನಿಂದ ಬಂದ ಲಾರಿ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎಸಿಪಿ ಮೋಹನ್ ಲಾರಿ ಮತ್ತು ಲಾರಿಯ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸಚಿವ ಜಿ.ಟಿ.ದೇವೇಗೌಡರ ಕಾರಿನಲ್ಲಿ ಚಾಲಕ, ಮತ್ತವರ ಪಿಎ, ಅವರ ಆಪ್ತರು ಇದ್ದರು ಎನ್ನಲಾಗಿದೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರು ಜಖಂಗೊಂಡಿದೆ. ಸಚಿವರು ಮತ್ತು ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





