ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ

ಬೆಂಗಳೂರು, ಎ. 8: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ನಾಳೆ(ಎ.9) ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಎ.9ರ ಮಂಗಳವಾರ ಮಧ್ಯಾಹ್ನ 1ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಇಲ್ಲಿನ ಸರಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಏರ್ಪಡಿಸಿರುವ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನೇಕಲ್ ನಾರಾಯಣಸ್ವಾಮಿ ಪರ ಮತಯಾಚನೆ ಮಾಡಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್, ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ದೇಶ್ವರ್, ತುಮಕೂರು ಅಭ್ಯರ್ಥಿ ಜಿ.ಎಸ್.ಬಸವರಾಜು, ಶಾಸಕರು, ಮುಖಂಡರು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಸಂಜೆ ಮೈಸೂರಿನಲ್ಲಿ ಸಭೆ: ಚಿತ್ರದುರ್ಗದ ಸಭೆಯ ಬಳಿಕ ಪ್ರಧಾನಿ ಮೋದಿ ಅವರು ಮೈಸೂರಿಗೆ ಆಗಮಿಸಲಿದ್ದು, ಸಂಜೆ ನಾಲ್ಕು ಗಂಟೆಗೆ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಲಿದ್ದಾರೆ ಎಂದು ತಿಳಿಸಲಾಗಿದೆ.







