ಇಡಿಸಿ ಮಹತ್ವ ಅರಿತು ಬಳಸಿ: ಜಿಲ್ಲಾ ಚುನಾವಣಾಧಿಕಾರಿ
ಮಂಗಳೂರು, ಎ.11: ಲೋಕಸಭಾ ಚುನಾವಣೆ ಪ್ರಕ್ರಿಯೆಗೆ ನಿಯೋಜನೆಗೊಂಡ ಮತಗಟ್ಟೆ ಸಿಬ್ಬಂದಿ ಮತದಾನದಿಂದ ಯಾವುದೇ ಕಾರಣಕ್ಕೆ ವಂಚಿತರಾಗಬಾರದೆಂಬ ಉದ್ದೇಶದಿಂದ ಈಗಾಗಲೇ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯ ಪ್ರಮಾಣಪತ್ರ(ಇಡಿಸಿ) ಹಾಗೂ ಪೋಸ್ಟಲ್ ಬ್ಯಾಲೆಟ್‌ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಜಿಲ್ಲೆಯಲ್ಲಿ 9,439 ಜನರಿಗೆ ಇಡಿಸಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈವರೆಗೆ 2,900 ಇಡಿಸಿ ವಿತರಣೆಯಾಗಿದೆ. ಉಳಿದೆಲ್ಲ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗೆ ಎ.13 ಮತ್ತು 14ರಂದು ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿತರಣೆಗೆ ಅವಕಾಶ ಮಾಡಿ ಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಯಾರೊಬ್ಬ ಅರ್ಹ ಮತದಾರರು ಮತದಾನದಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಮಾಡಲಾ ಗಿರುವ ವ್ಯವಸ್ಥೆಯನ್ನು ಸದ್ಬಳಕೆ ಮಾಡಿಕೊಂಡು ಪ್ರತಿಯೊಬ್ಬರು ಮತದಾನದ ಜವಾಬ್ದಾರಿಯನ್ನು ಅರಿತು ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಇಡಿಸಿಯನ್ನು ಪಡೆದು ಮತದಾನ ಮಾಡಿ ಎಂದರು.
ಪೋಸ್ಟಲ್ ಬ್ಯಾಲೆಟ್ ಮತ್ತು ಇಡಿಸಿ ವಿತರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯ ಆರಂಭದ ದಿನಗಳಿಂದ ಕಾರ್ಯೋ ನ್ಮುಖರಾಗಿದ್ದು ಪ್ರಕ್ರಿಯೆ ಯಶಸ್ವಿಗೆ ಮತದಾರರ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







