ಕುಂದಗೋಳ, ಚಿಂಚೋಳಿ ಉಪ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ರಾಜಕೀಯ ಪಕ್ಷಗಳ ಕಸರತ್ತು

ಬೆಂಗಳೂರು, ಎ. 20: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ನಿಧನ ಹಾಗೂ ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾಗಿರುವ ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಸವಾಲಾಗಿ ಪರಿಗಣಿಸಿದೆ.
ಎ.22ರಂದು ಉಪ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆದರೆ, ಲೋಕಸಭೆ ಚುನಾವಣಾ ಪ್ರಚಾರದಲ್ಲಿರುವ ರಾಜಕೀಯ ಪಕ್ಷಗಳ ಮುಖಂಡರು ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.
ಕುಂದಗೋಳ ಕ್ಷೇತ್ರದಿಂದ ಶಿವಳ್ಳಿ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದ್ದರೆ, ಬಿಜೆಪಿ ಸ್ಥಳೀಯರಿಗೆ ಟಿಕೆಟ್ ನೀಡಲು ಉದ್ದೇಶಿಸಿದೆ. ಅತ್ತ ಚಿಂಚೋಳಿ ಕ್ಷೇತ್ರದಿಂದ ರಾಜ್ಯ ಸರಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎಂದು ಗೊತ್ತಾಗಿದೆ.
ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ವಿರುದ್ಧ ಸಿಡಿದಿದ್ದ ಡಾ. ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಹಿರಿಯ ಮುಖಂಡ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಹೀಗಾಗಿ ಬಿಜೆಪಿ ರತ್ನಪ್ರಭ ಅವರನ್ನು ಕಣಕ್ಕಿಳಿಸಲಿದೆ ಎನ್ನಲಾಗಿದೆ. ಇನ್ನು ಮಲ್ಲಿಕಾರ್ಜುನ ಖರ್ಗೆ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಗೆ ಸವಾಲಾಗಿರುವ ಚಿಂಚೋಳಿ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಎ.22 ರಂದು ಉಪ ಚುನಾವಣೆ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಎ.29 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಎ.30ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 2ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆ. ಮೇ 19ರಂದು ಉಪ ಚುನಾವಣೆ ನಡೆಯಲಿದ್ದು, ಮೇ 23ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶದ ದಿನವೇ ಫಲಿತಾಂಶ ಪ್ರಕಟಗೊಳ್ಳಲಿದೆ.