ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ವಿರುದ್ಧ ಮಾನಹಾನಿ ಮೊಕದ್ದಮೆ: ಸತೀಶ್ ಜಾರಕಿಹೊಳಿ

ಬೆಂಗಳೂರು, ಎ.22: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ 24 ಗಂಟೆಯೊಳಗಾಗಿ ಸಾರ್ವಜನಿಕವಾಗಿ ಲಿಖಿತ ಕ್ಷಮೆಯನ್ನು ಕೋರಬೇಕು. ಇಲ್ಲದಿದ್ದರೆ, ಅವರ ಮೇಲೆ ಮಾನಹಾನಿ ಮೊಕದ್ದಮೆ ಮತ್ತು ಇತರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
ಎ.16ರಂದು ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ನಾನು ಮಾತನಾಡುವ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದೇನೆ ಎಂದು ವೆಂಕಟನಾರಾಯಣ, ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು ಎಂದು ಅವರು ತಿಳಿಸಿದ್ದಾರೆ.
ಈ ದೂರಿನನ್ವಯ ಚುನಾವಣಾ ಆಯೋಗವು ಸತ್ಯಾಸತ್ಯತೆ ಪರಿಶೀಲಿಸಿ, ನಾನು ಯಾವುದೇ ಸಮುದಾಯದ ಹೆಸರನ್ನು ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ ಎಂಬ ನಿರ್ಧಾರಕ್ಕೆ ಬಂದಿದೆ. ಈ ಮಹಾಸಭಾದ ದೂರಿನಿಂದ ನಾನು ಸಾರ್ವಜನಿಕವಾಗಿ ಸಾಕಷ್ಟು ಟೀಕೆಗೆ ಒಳಗಾಗಿದ್ದೇನೆ ಎಂದು ಸತೀಶ್ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದ್ದಾರೆ.
ವೆಂಕಟನಾರಾಯಣ 24 ಗಂಟೆಯೊಳಗಾಗಿ ಸಾರ್ವಜನಿಕವಾಗಿ ಲಿಖಿತ ಕ್ಷಮೆಯನ್ನು ಕೋರದಿದ್ದರೆ, ಅವರ ವಿರುದ್ಧ ಮಾನಹಾನಿ ಮೊಕದ್ದಮೆ ಹಾಗೂ ಇತರೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಸತೀಶ್ ಜಾರಕಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







