‘ಬರಗಾಲ’ ಕುಡಿಯುವ ನೀರಿನ ಸಮಸ್ಯೆ ತ್ವರಿತವಾಗಿ ಸ್ಪಂದಿಸಲು ಅಧಿಕಾರಿಗಳಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಸೂಚನೆ
ಬೆಂಗಳೂರು, ಎ. 30: ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನರಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಪೂರೈಕೆಗೆ ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಗೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ರಾಜ್ಯದ 26 ಜಿಲ್ಲೆಗಳ 1,205 ಗ್ರಾಮಗಳಿಗೆ 1,893 ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಲ್ಲದೆ 1,064 ಗ್ರಾಮಗಳಿಗೆ 1,392 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಜನರಿಗೆ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ನಗರ ಪ್ರದೇಶಗಳ 303 ವಾರ್ಡ್‌ಗಳಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಕಂಟ್ರೋಲ್ ರೂಂ ತೆರೆದಿದ್ದು ದಿನದ 24 ಗಂಟೆಗಳೂ ಕುಂದು-ಕೊರತೆಗಳನ್ನು ಆಲಿಸಿ, ಸಮಸ್ಯೆ ಪರಿಹರಿಸಲಾಗುವುದು ಎಂದ ಅವರು, ಪ್ರತಿ ಹೋಬಳಿಗೆ ಜಿಲ್ಲಾಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ ಎಂದರು.
ಕುಡಿಯುವ ನೀರಿನ ವ್ಯವಸ್ಥೆ, ಜನರಿಗೆ ಉದ್ಯೋಗ ಸೃಜನೆ, ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದು, ಪ್ರತಿ ವಾರ ಜಿ.ಪಂ. ಸಿಇಓಗಳು ಟಾಸ್ಕ್‌ಫೋರ್ಸ್ ಸಭೆ ನಡೆಸಿ ಪ್ರಗತಿ ಪರಿಶೀಲನೆಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ದುರಸ್ತಿ: ಶುದ್ದ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಬಗ್ಗೆ ಪ್ರತಿನಿತ್ಯ ಪರಿಶೀಲನೆ ಮಾಡಿ, ದುರಸ್ತಿಗೆ ಒಳಗಾದ ಘಟಕಗಳನ್ನು ಕೂಡಲೇ ರಿಪೇರಿ ಮಾಡಿಬೇಕೆಂದ ಅವರು, ಪ್ರಸ್ತುತ 11 ಗೋಶಾಲೆಗಳಲ್ಲಿ 11,120 ಜಾನುವಾರುಗಳನ್ನು ಸಂರಕ್ಷಿಸಲಾಗಿದ್ದು, 128 ಮೇವು ಬ್ಯಾಂಕ್ ಸ್ಥಾಪಿಸಲಾಗಿದೆ ಎಂದರು.
ಉದ್ಯೋಗ ಸೃಜನೆ ಕಾಮಗಾರಿಯಡಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಮುದಾಯ ಮಟ್ಟದ ಜಲ ಸಂರಕ್ಷಣೆ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ. 2019ರ ಮಾರ್ಚ್ 30ರ ಅವಧಿಗೆ ನಿಗದಿಪಡಿಸಿದ್ದ ಒಟ್ಟು 10 ಕೋಟಿ ಮಾನವ ದಿನಗಳ ಗುರಿಗೆ ಬದಲಾಗಿ 10.47 ಕೋಟಿ ಮಾನವ ದಿನಗಳ ಸೃಜಿಸಲಾಗಿದೆ. 21.11ಲಕ್ಷ ಕುಟುಂಬಗಳಿಗೆ ಉದ್ಯೋಗ ಒದಗಿಸಿ 3,821.46 ಕೋಟಿ ರೂ.ವೆಚ್ಚ ಮಾಡಲಾಗಿದೆ ಎಂದು ಅಂಕಿ-ಅಂಶಗಳನ್ನು ನೀಡಿದರು.







