ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಗೋ ಶಾಲೆ ಆರಂಭಿಸಿ: ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಮೇ 3: ರಾಜ್ಯದ ಎಲ್ಲ ತಾಲೂಕುಗಳಲ್ಲೂ ಗೋ ಶಾಲೆ ಆರಂಭಿಸಿ, ಆ ಶಾಲೆಗಳಲ್ಲಿ ಮೇವು, ನೀರು, ಔಷಧಿ ಲಭ್ಯವಿರುವಂತೆ ನೋಡಿಕೊಳ್ಳಬೇಕೆಂದು ತಾಲೂಕಿನ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರಿನ ಎ.ಮಲ್ಲಿಕಾರ್ಜುನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು.
ಗೋ ಶಾಲೆಗಳನ್ನು ಆರಂಭಿಸಿ ಎಲ್ಲ ಕಡೆಗೂ ಪ್ರಚಾರ ಮಾಡಿ, ಮೇವು, ನೀರನ್ನು ಒದಗಿಸಿರುವ ಬಗ್ಗೆ ಸೇರಿ ಇನ್ನಿತರ ಸೌಲಭ್ಯಗಳನ್ನು ಒದಗಿಸಿರುವ ಬಗ್ಗೆ ಎರಡು ವಾರದಲ್ಲಿ ವರದಿ ಸಲ್ಲಿಸಬೇಕೆಂದು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಇದಕ್ಕೂ ಮೊದಲು ರಾಜ್ಯದಲ್ಲಿ ಗೋ ಶಾಲೆಗಳನ್ನು ಆರಂಭಿಸಿರುವ ಬಗ್ಗೆ ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿದ ರಾಜ್ಯ ಸರಕಾರದ ಪರ ವಕೀಲರು, ಮೂರು ಜಿಲ್ಲೆಗಳಲ್ಲಿ ಗೋ ಶಾಲೆ ಆರಂಭಿಸಲಾಗಿದೆ. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಡಿಸಿ, ತಹಶೀಲ್ದಾರ್ ಒಳಗೊಂಡ ಟಾಸ್ಕ್ ಫೋರ್ಸ್(ಕಾರ್ಯಪಡೆ) ರಚಿಸಲಾಗಿದೆ. ಇದಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ಅನುದಾನ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಮೇವು, ನೀರು, ಔಷಧಿಗಳನ್ನು ಈಗಾಗಲೇ ಗೋ ಶಾಲೆಗಳಿಗೆ ಪೂರೈಕೆ ಮಾಡಲಾಗಿದ್ದು, ತಾತ್ಕಾಲಿಕವಾಗಿ ಪಶು ವೈದ್ಯಕೀಯ ಚಿಕಿತ್ಸಾಲಯ ಆರಂಭಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲ ಎನ್.ಪಿ.ಅಮೃತೇಶ್ ಅವರು, ಬರಗಾಲದ ಪರಿಸ್ಥಿತಿಗೆ ಅನುಗುಣವಾಗಿ ಸರಕಾರ ಗೋ ಶಾಲೆಗಳನ್ನು ಆರಂಭಿಸಿಲ್ಲ. ಇದು ಕೇವಲ ದಾಖಲೆಗಳಲ್ಲಿ ಮಾತ್ರವೆ ಇದೆ ಎಂದು ಪೀಠದ ಗಮನಕ್ಕೆ ತಂದರು. ನ್ಯಾಯಪೀಠವು ವಕೀಲರ ವಾದವನ್ನು ಆಲಿಸಿ ಗೋ ಶಾಲೆಗಳನ್ನು ಆರಂಭಿಸಿರುವ ಬಗ್ಗೆ ಹಾಗೂ ಯಾವ್ಯಾವ ಕ್ರಮಗಳನ್ನು ತೆಗೆದುಕೊಂಡಿದ್ದಿರಿ ಎಂಬುದರ ಕುರಿತು ಎರಡು ವಾರಗಳಲ್ಲಿ ಸೂಕ್ತ ದಾಖಲೆಗಳೊಂದಿಗೆ ವರದಿಯನ್ನು ಸಲ್ಲಿಸಬೇಕೆಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿತು.







