ಲೋಕಸಭೆ ಚುನಾವಣೆ ಮತ ಎಣಿಕೆ: ಮೇ 23ರಂದು ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು, ಮೇ 9: ಲೋಕಸಭೆ ಚುನಾವಣೆ ಮತ ಎಣಿಕೆ, ಫಲಿತಾಂಶದ ಹಿನ್ನೆಲೆಯಲ್ಲಿ ಮೇ 23ರಂದು ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಮೇ 23ರಂದು ಇಲ್ಲಿನ ಮೌಂಟ್ ಕಾರ್ಮಲ್ ಕಾಲೇಜು, ಸೈಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎನ್‌ಎಂಕೆಆರ್‌ವಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅದೇ ದಿನ ಫಲಿತಾಂಶ ಹೊರಬೀಳುವ ಸಾಧ್ಯತೆಗಳಿವೆ.
ಚುನಾವಣಾ ಫಲಿತಾಂಶದ ಈ ವೇಳೆ ಸಮಾಜಘಾತಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ-ಸೋತ ಅಭ್ಯರ್ಥಿಗಳ ಪರ-ವಿರೋಧ ಮೆರವಣಿಗೆ/ಪ್ರತಿಭಟನೆ, ಕಾನೂನು ಭಂಗ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮೇ 23ರ ಬೆಳಗ್ಗೆ 6ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ಐದು ಮಂದಿಗಿಂತ ಹೆಚ್ಚು ಜನ ಗುಂಪು ಸೇರುವುದು, ಸಭೆ ಅಥವಾ ಮೆರವಣಿಗೆ ನಡೆಸುವುದು, ಪಟಾಕಿ ಸಿಡಿಸುವುದು ಹಾಗೂ ಭಿತ್ತಿ ಪತ್ರ ಪ್ರದರ್ಶನವನ್ನು ನಿಷೇಧಿಸಲಾಗಿದೆ.





