ನಾನು ಮತ್ತೆ ಸಿಎಂ ಆಗುತ್ತೇನೆ, ಪದಗ್ರಹಣಕ್ಕೆ ಡಿಕೆಶಿ ಮುಹೂರ್ತ ನಿಗದಿ ಮಾಡಲಿ: ಯಡಿಯೂರಪ್ಪ

ಹುಬ್ಬಳ್ಳಿ, ಮೇ 11: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುವುದು ನಿಶ್ಚಿತ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ನನ್ನ ಪದಗ್ರಹಣಕ್ಕೆ ಮುಹೂರ್ತ ನಿಗದಿ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 23ರ ಬಳಿಕ ಮೈತ್ರಿ ಸರಕಾರ ಪತನವಾಗುತ್ತದೆ. ನಾನು ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದರು.
ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಹೊಂದಿದ್ದು, ಉಪ ಚುನಾವಣೆ ನಡೆಯುತ್ತಿರುವ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಪಕ್ಷೇತರರ ಬೆಂಬಲವು ನಮಗಿದ್ದು, ನಮ್ಮ ಸಂಖ್ಯಾಬಲ 109 ಆಗಲಿದೆ ಎಂದು ಅವರು ಹೇಳಿದರು.
ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಹಿಂದಿಕ್ಕಿ ನಾವು 22 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್ ಪಕ್ಷದ ಹಲವಾರು ಶಾಸಕರು ಬೇಸತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಜನರ ಬಯಕೆಯಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ. ಕಾಂಗ್ರೆಸ್ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ. ನಾವು ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಇಲ್ಲಿ ಹಣ ಬಲ ನಡೆಯಲ್ಲ, ಜನ ಬಲದ ಗೆಲುವು ಆಗಲಿದೆ ಎಂದು ಅವರು ಹೇಳಿದರು.
ಸಿಎಂ ವಿರುದ್ಧ ವಾಗ್ದಾಳಿ: ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಮಗ ಸೋಲುತ್ತಾರೆ ಎನ್ನುವ ಗೊಂದಲ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಾಡುತ್ತಿದೆ. ಆದುದರಿಂದಲೇ, ರೆಸಾರ್ಟ್‌ಗೆ ಹೋಗುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿರುವ ಭೀಕರ ಬರಗಾಲವನ್ನು ಎದುರಿಸಲು ಸಾಧ್ಯವಾಗದ ಈ ಸರಕಾರದ ಬ್ರೈನ್ ಡೆಡ್(ಮೆದುಳು ನಿಷ್ಕ್ರಿಯ)ಆಗಿದೆ. ಮೈತ್ರಿ ಸರಕಾರದಲ್ಲಿ ಅಸಮಾಧಾನ ಭುಗಿಲೆದ್ದಿರುವುದಕ್ಕೆ ಕುಮಾರಸ್ವಾಮಿ ಹಾಗೂ ದೇವೇಗೌಡರ ರೆಸಾರ್ಟ್ ವಾಸ್ತವ್ಯವೇ ಸಾಕ್ಷಿ ಎಂದು ಅವರು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ಕೆಲವು ಪ್ರಭಾವಿ ನಾಯಕರು ಸೋತು ಮನೆಗೆ ಹೋಗಲಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಕನಿಷ್ಠ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿ ಆಗಿದೆ ಎಂದು ಯಡಿಯೂರಪ್ಪ ತಿಳಿಸಿದರು.







