ಜೂನ್ ಅಂತ್ಯದೊಳಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿಯಲಿ: ಬಸವರಾಜ ಹೊರಟ್ಟಿ

ಬೆಂಗಳೂರು, ಮೇ 12: ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಕರ, ಉಪನ್ಯಾಸಕರ ಹಾಗೂ ಸಿಬ್ಬಂದಿ ವರ್ಗದವರ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ ಅಂತ್ಯದೊಳಗೆ ಮುಗಿಸಬೇಕೆಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಮನವಿ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಪತ್ರ ಬರೆದಿರುವ ಅವರು, ಕಳೆದ ಮೂರು ವರ್ಷಗಳಿಂದ ಚುನಾವಣೆ ಪ್ರಕ್ರಿಯೆ ಹಾಗೂ ಶಿಕ್ಷಣ ಇಲಾಖೆಯ ತಪ್ಪುನಿರ್ಧಾರಗಳಿಂದಾಗಿ ಶಿಕ್ಷಕರ, ಉಪನ್ಯಾಸಕರ ಹಾಗೂ ಸಿಬ್ಬಂದಿ ವರ್ಗದವರ ವರ್ಗಾವಣೆ ನಡೆದಿಲ್ಲವೆಂಬುದು ಅತ್ಯಂತ ನೋವಿನ ಸಂಗತಿಯಾಗಿದೆ. ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆಯನ್ನು ಪ್ರತೀವರ್ಷ ಮೇ ತಿಂಗಳ ಅಂತ್ಯದೊಳಗಾಗಿ ಮುಗಿಸಿ, ಜೂನ್ ಅಂತ್ಯದೊಳಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಮುಗಿಸಬೇಕೆಂದು ಶಿಕ್ಷಕರ ಒತ್ತಾಯವಾಗಿದೆ ಎಂದು ತಿಳಿಸಿದರು.
ಇಲಾಖೆಯು ವೇಳಾಪಟ್ಟಿ ಪ್ರಕಟಿಸಿ ವರ್ಗಾವಣೆ ಪ್ರಕ್ರಿಯೆ ನಡಸದೇ ಇರುವುದರಿಂದ ಶಿಕ್ಷಕ ಸಮುದಾಯ ಮಾನಸಿಕವಾಗಿ ಹತಾಶರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಶಿಕ್ಷಣ ವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮವುಂಟಾಗುವುದರಲ್ಲಿ ಸಂದೇಹವಿಲ್ಲ. ಈ ವರ್ಷದ ವರ್ಗಾವಣೆ ಪ್ರಕ್ರಿಯೆಗೆ ಚುನಾವಣೆ ಆಯೋಗ ಅನುಮತಿ ನೀಡಿದೆ. ಹೀಗಾಗಿ ಇಲಾಖೆ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಲು ಯಾವುದೇ ನಿರ್ಬಂಧ ಇಲ್ಲ. ಕೂಡಲೆ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಿ ಎಂದು ಅವರು ಪತ್ರಿಕಾ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.







