ಕುಮಾರಸ್ವಾಮಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ಮೇ 25: ಲೋಕಸಭಾ ಚುನಾವಣೆ ಹಾಗೂ ವಿಧಾನಸಭೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ವಿರುದ್ಧ ಜನಾದೇಶ ಬಂದಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಶನಿವಾರ ನಗರದ ಡಾಲರ್ಸ್ ಕಾಲನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನೇತೃತ್ವದ ಸರಕಾರಕ್ಕೆ ನೀಡಿರುವ ಬೆಂಬಲವನ್ನು ಸಿದ್ದರಾಮಯ್ಯ ಹಿಂಪಡೆಯಲಿ ಎಂದು ಒತ್ತಾಯಿಸಿದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ್ತೊಮ್ಮೆ ಸ್ಪಷ್ಟ ಬಹುಮತ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವೇ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜಕೀಯ ಕ್ಷೇತ್ರದಲ್ಲಿನ ಇನ್ನು ಶಿಶು, ಬಫೂನ್ ರೀತಿಯಲ್ಲಿ ದೇಶಾದ್ಯಂತ ಪ್ರವಾಸ ಮಾಡಿದರೂ, ಜನರು ಅವರನ್ನು ತಿರಸ್ಕರಿಸಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.
ರಾಜ್ಯದಲ್ಲಿ ಯಡಿಯೂರಪ್ಪರನ್ನು ಅಧಿಕಾರದಿಂದ ದೂರವಿಡಲು, ವಾಮಮಾರ್ಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಇವರಿಗೆ ರಾಜ್ಯದ ಅಭಿವೃದ್ಧಿ ಬೇಕಾಗಿಲ್ಲ, ಸ್ವಾರ್ಥಕ್ಕಾಗಿ ಅಧಿಕಾರ ನಡೆಸುತ್ತಿದ್ದಾರೆ. ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ವಿರುದ್ಧ ಜನಾದೇಶ ಬಂದಿದ್ದರೂ ಕುಮಾರಸ್ವಾಮಿ ಅಧಿಕಾರದಲ್ಲಿ ಮುಂದುವರೆದಿದ್ದಾರೆ. ಅವರಿಗೆ ಸ್ವಾಭಿಮಾನ, ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದರು.
ಕುಮಾರಸ್ವಾಮಿ ತಮ್ಮ ಮಗನನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಗೆಲ್ಲಲಿಲ್ಲ. ಇವೆಲ್ಲ ವಿಷಯಗಳು ಗೊತ್ತಿರುವುದರಿಂದಲೇ ಸಚಿವ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ಆಸ್ಟ್ರೇಲಿಯ ಪ್ರವಾಸಕ್ಕೆ ತೆರಳಿದ್ದಾರೆ ಎಂದು ರೇಣುಕಾಚಾರ್ಯ ತಿಳಿಸಿದರು.
ಈ ಸರಕಾರ ಎಷ್ಟು ದಿನಗಳಲ್ಲಿ ಪತನವಾಗುತ್ತದೆ ಎಂದು ಹೇಳಲು ನಾನು ಎಚ್.ಡಿ.ರೇವಣ್ಣ ಅಲ್ಲ. ಅವರ ರೀತಿ ನಿಂಬೆಹಣ್ಣು ಮಂತ್ರಿಸಿಕೊಂಡು ಇಟ್ಟುಕೊಳ್ಳಲ್ಲ. ಅವರು ಇಟ್ಟುಕೊಂಡಿರುವ ನಿಂಬೆಹಣ್ಣು ಕೆಟ್ಟು ಹೋಗಿದೆ. ಇದರಿಂದಾಗಿ, ದೇವೇಗೌಡರು ಸೋಲು ಅನುಭವಿಸುವಂತಾಯಿತು ಎಂದು ಅವರು ವ್ಯಂಗ್ಯವಾಡಿದರು.







