ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಹುಲ್, ಸೋನಿಯಾ

ಹೊಸದಿಲ್ಲಿ, ಮೇ 29: ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭ ರಾಷ್ಟ್ರಪತಿ ಭವನದಲ್ಲಿ ಗುರುವಾರ ನಡೆಯಲಿದೆ. ಈ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ತೆಲಂಗಾಣದ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಸಹಿತ ಹಲವು ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಹಾಗೂ ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಸಹಿತ ವಿದೇಶದ ನಾಯಕರು ಕೂಡಾ ಪಾಲ್ಗೊಳ್ಳಲಿದ್ದಾರೆ. ಸಮಾರಂಭ ಗುರುವಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನರೇಂದ್ರ ಮೋದಿ ಹಾಗೂ ಕೇಂದ್ರ ಸಂಪುಟದ ಇತರ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ಸಂಚಾರ ವ್ಯವಸ್ಥೆ ವಿಸ್ತರಿಸಲಾಗಿದೆ. ನಗರದಲ್ಲಿರುವ ನಿರ್ದಿಷ್ಟ ರಸ್ತೆಗಳು ಗುರುವಾರ ಸಂಜೆ 4 ಗಂಟೆಯಿಂದ 9 ಗಂಟೆ ವರೆಗೆ ಬಂದ್ ಆಗಲಿದೆ ಎಂದು ದಿಲ್ಲಿ ಸಂಚಾರ ಪೊಲೀಸರು ತಿಳಿಸಿದ್ದಾರೆ.