ಎಸೆಸೆಲ್ಸಿಯಲ್ಲಿ ಮತ್ತೆ ಅಗ್ರಸ್ಥಾನ ಪಡೆಯಲು ಯತ್ನ: ದಿನಕರ ಬಾಬು

ಉಡುಪಿ, ಮೇ 31: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯಬೇಕೆನ್ನುವ ಜಿಲ್ಲೆಯ ಅತಿಯಾದ ಆತ್ಮವಿಶ್ವಾಸ ಮತ್ತು ತಂತ್ರಗಾರಿಕೆಯನ್ನು ಬೇರೆ ಜಿಲ್ಲೆಯವರು ಅನುಕರಣೆ ಮಾಡಿದ್ದರಿಂದ ಜಿಲ್ಲೆಗೆ ಹಿನ್ನೆಡೆಯಾಗಿದ್ದು, ರಾಜ್ಯದಲ್ಲಿ 5 ನೇ ಸ್ಥಾನ ಪಡೆಯುವಂತಾಗಿದೆ. ಮುಂದಿನ ಸಾಲಿನಲ್ಲಿ ಬೇರೆ ರೀತಿಯ ತಂತ್ರಗಾರಿಕೆ ಹಾಗೂ ಮಕ್ಕಳಲ್ಲಿ ಕಲಿಯುವಿಕೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಅಗ್ರಸ್ಥಾನ ಪಡೆಯಲು ಪ್ರಯತ್ನಿಸಲಾಗುವುದು ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ಹೇಳಿದ್ದಾರೆ.
ಶುಕ್ರವಾರ ನಗರದ ಬಾಲಕಿಯರ ಸರಕಾರಿ ಪ್ರೌಢಶಾಲೆಯ ಪ್ರಾರಂಭೋತ್ಸವ ಹಾಗೂ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಜಿಲ್ಲೆ ರಾಜ್ಯದಲ್ಲಿ ಮತ್ತೆ ಪ್ರಥಮ ಸ್ಥಾನ ಪಡೆಯುವಲ್ಲಿ ಎಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಸಹಕರಿಸಬೇಕೆಂದು ಅವರು ಮನವಿ ಮಾಡಿದರು.
ಸರಕಾರಿ ಬಾಲಕಿಯರ ಪ್ರೌಢಶಾಲೆಯು ಈ ಹಿಂದಿನಿಂದಲೂ ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿದ್ದು, ಇಲ್ಲಿನ ವಿದ್ಯಾರ್ಥಿನಿಯರು ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೇ ಕ್ರೀಡಾ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದ್ದಾರೆ. ಇಂದಿನ ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಪೈಪೋಟಿ ನಡುವೆ ಈ ಸರಕಾರಿ ಶಾಲೆ ಉತ್ತಮ ಸಾಧನೆ ತೋರಿರುವುದಕ್ಕೆ ಇಲ್ಲಿನ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದ ಕಾಳಜಿಯನ್ನು ದಿನಕರಬಾಬು ಪ್ರಶಂಸಿಸಿದರು.
ನಗರಸಭಾ ಸದಸ್ಯೆ ರಶ್ಮಿತಾ ಸಿ. ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಮೀನುಗಾರಿಕಾ ಪೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯ ವಿಶ್ವನಾಥ ಬಾಯರಿ ಮತ್ತಿತರರು ಉಪಸ್ಥಿತರಿದ್ದರು.







