ಮನ್ಸೂರ್‌ಗೆ ಸೇರಿದ ವಸ್ತುಗಳು ಕ್ಯಾಮರಾ ಕಣ್ಗಾವಲಿನಲ್ಲಿ ಸಾಗಿಸಲು ಕೋರಿ ಹೈಕೋರ್ಟ್‌ಗೆ ಅರ್ಜಿ
ಐಎಂಎ ಬಹುಕೋಟಿ ವಂಚನೆ ಪ್ರಕರಣ

ಬೆಂಗಳೂರು, ಜೂ.13: ಐ ಮಾನಿಟರಿ ಅಡ್ವೈಸರಿ(ಐಎಂಎ) ಸಮೂಹ ಸಂಸ್ಥೆಗಳ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ಮನ್ಸೂರ್ ಖಾನ್‌ಗೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಪೊಲೀಸರು ಮುಟ್ಟುಗೋಲು ಹಾಕಿದ ಬಳಿಕ ಕ್ಯಾಮರಾ ಕಣ್ಗಾವಲಿನಲ್ಲಿ ಸಾಗಣೆಗೆ ನಿರ್ದೇಶಿಸಲು ಕೋರಿ ಹೈಕೋರ್ಟ್‌ಗೆ ವಕೀಲ ಮುಹಮ್ಮದ್ ತಾಹೀರ್ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಸರಕಾರ ಮನ್ಸೂರ್‌ಗೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದೆ. ಅದರಲ್ಲಿ ಸಾಕಷ್ಟು ಚಿನ್ನಾಭರಣ ಮತ್ತು ವಜ್ರದ ಆಭರಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿರುವ ಕಾರಣ, ಕೆಲ ಸ್ವಾರ್ಥಿಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ, ಎಲ್ಲ ವಸ್ತುಗಳನ್ನು ಕ್ಯಾಮರಾ ಕಣ್ಗಾವಲಿನಲ್ಲಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಹಾಗೂ ಮುಟ್ಟುಗೋಲು ಹಾಕಿಕೊಳ್ಳುವ ಪ್ರತಿಯೊಂದು ವಸ್ತುವಿನ ಬಗ್ಗೆಯೂ ವಿವರ ದಾಖಲಿಸಬೇಕು. ಕೆಪಿಐಡಿಎಫ್‌ಇ 2004ರಂತೆ ವಿವರವಾಗಿ ಮುಟ್ಟುಗೋಲಿನ ವಸ್ತುಗಳ ಹೆಸರುಗಳನ್ನು ದಾಖಲಿಸಬೇಕು. ಈ ಬಗ್ಗೆ ಉತ್ತರ ವಿಭಾಗದ ಸಹಾಯಕ ಆಯುಕ್ತರಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಇನ್ನಷ್ಟೇ ಅರ್ಜಿ ವಿಚಾರಣೆಗೆ ಬರಬೇಕಾಗಿದೆ. ಪ್ರತಿವಾದಿಗಳನ್ನಾಗಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಬೆಂಗಳೂರು ಉತ್ತರ ವಿಭಾಗದ ಸಹಾಯಕ ಆಯುಕ್ತ, ಐಎಂಎ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ಮನ್ಸೂರ್ ಖಾನ್ ಅವರ ಹೆಸರನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.





