ಡಿಜಿಪಿ ನೀಲಮಣಿ ರಾಜು ಹುದ್ದೆ ನೇಮಕ ವಿವಾದ: ಪ್ರಕರಣವನ್ನು ಸಿಎಟಿಗೆ ವರ್ಗಾಯಿಸಿದ ಹೈಕೋರ್ಟ್

ಬೆಂಗಳೂರು, ಜೂ.18: ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ನೀಲಮಣಿ ಎನ್.ರಾಜು ಅವರನ್ನು ನೇಮಕ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ)ಗೆ ಶೀಘ್ರವಾಗಿ ಪ್ರಕರಣ ಇತ್ಯರ್ಥಪಡಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಡಿಜಿಪಿ ಎಂ.ಎನ್.ರೆಡ್ಡಿ ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಮತ್ತು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಸಿಎಟಿಯಲ್ಲಿ ಅರ್ಜಿ ವಿಚಾರಣೆ ಇನ್ನೂ ಬಾಕಿಯಿದೆ. ಹೀಗಾಗಿ, ಪ್ರಕರಣವನ್ನು ಅಲ್ಲಿಯೇ ಇತ್ಯರ್ಥಪಡಿಸಿಕೊಳ್ಳಲು ಆದೇಶಿಸಿದ ನ್ಯಾಯಪೀಠ, ಅರ್ಜಿಯನ್ನು ಇತ್ಯರ್ಥಪಡಿಸಿತು. ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ಮಧ್ಯಂತರ ಮನವಿ ಪುರಸ್ಕರಿಸದ ಕಾರಣ ರೆಡ್ಡಿ ಅವರು ಹೈಕೋರ್ಟ್‌ಗೆ ಸಲ್ಲಿಸಿ, ಯುಪಿಎಸ್‌ಸಿ ಸಮಿತಿ ಶಿಫಾರಸು ಮಾಡುವ ಹೆಸರನ್ನು ಡಿಜಿಪಿ ಹುದ್ದೆಗೆ ಪರಿಗಣಿಸಬೇಕು. ಈ ಕುರಿತಂತೆ ಸುಪ್ರೀಂಕೋರ್ಟ್‌ನ ಸ್ಪಷ್ಟ ಆದೇಶವಿದ್ದರೂ ಅದನ್ನು ಸಾರಾಸಗಟು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಿದ್ದರು.





