ಸಣ್ಣ ಕೈಗಾರಿಕೆಗಳ ಸಮಸ್ಯೆ ಪರಿಹರಿಸಲು ಜಿಲ್ಲಾವಾರು ಅದಾಲತ್: ಸಚಿವ ಎಚ್.ನಾಗೇಶ್

ಬೆಂಗಳೂರು, ಜೂ.27: ಮುಂದಿನ ದಿನಗಳಲ್ಲಿ ಸಣ್ಣ ಕೈಗಾರಿಕೆಗಳ ಸಮಸ್ಯೆಗಳಿಗೆ ಪರಿಹಾರ ನೀಡುವ ಸಲುವಾಗಿ ಜಿಲ್ಲಾವಾರು ಅದಾಲತ್ ನಡೆಸುವ ಮೂಲಕ ಸ್ಥಳದಲ್ಲಿಯೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ಕೈಗಾರಿಕೆಗಳ ಸಚಿವ ಎಚ್.ನಾಗೇಶ್ ಹೇಳಿದ್ದಾರೆ.
ಗುರುವಾರ ನಗರದಲ್ಲಿಂದು ಕರ್ನಾಟಕ ಕೈಗಾರಿಕಾ ಮಹಾ ಮಂಡಳಿ(ಎಫ್‌ಕೆಸಿಸಿಐ) ವತಿಯಿಂದ ಆಯೋಜಿಸಿದ್ದ ಅಂತರ್‌ರಾಷ್ಟ್ರೀಯ ಎಂಎಸ್‌ಎಂಇ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಾನು ಮೊದಲ ಬಾರಿಗೆ ಸಚಿವ ಸ್ಥಾನವನ್ನು ಅಲಂಕರಿಸಿದ್ದೇನೆ. ಹೀಗಾಗಿ, ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಸಣ್ಣ ಕೈಗಾರಿಕೆ ವಲಯ ಎದುರಿಸುತ್ತಿದ್ದು, ಅದಾಲತ್ ಮೂಲಕ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸರಕು ಸೇವಾ ವಲಯಕ್ಕೆ ಹೆಚ್ಚಿನ ತೆರಿಗೆ ನೀಡುವಂತಹ ಸಣ್ಣ ಕೈಗಾರಿಕೆ ವಲಯ ಮೂಲಭೂತ ಸೌಕರ್ಯ ಕೊರತೆ ಎದುರಿಸುತ್ತಿದ್ದೆ. ಅದನ್ನು ಪರಿಹಾರ ನೀಡಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಸಣ್ಣ ಕೈಗಾರಿಕೆಗಳಿಗೆ ಇರುವ ಮೂಲಭೂತ ಸಮಸ್ಯೆಗಳ ಕುರಿತು ಚರ್ಚಿಸಲು ಮುಂದಿನ ದಿನಗಳಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗುತ್ತದೆ. ಪೀಣ್ಯ ಕೈಗಾರಿಕೆ ಪ್ರದೇಶ ಸೇರಿದಂತೆ ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ಅವುಗಳನ್ನು ಬಗೆಹರಿಸಲು ನಿಟ್ಟಿನಲ್ಲಿ ಸರಕಾರ ಯೋಜನೆ ರೂಪಿಸಲಿದೆ. ಸಣ್ಣ ಕೈಗಾರಿಕೆ ವಲಯ ಒಂದು ವರ್ಷದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲಿದೆ ಎಂದು ಅವರು ಹೇಳಿದರು.
ನಾನು ಬೆಸ್ಕಾಂನಲ್ಲಿ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸಿದ್ದೇನೆ. ಹೀಗಾಗಿ, ಸಣ್ಣ ಕೈಗಾರಿಕೆಗಳಿಗೆ ಯಾವ ರೀತಿಯ ಸಮಸ್ಯೆಗಳಿವೆ ಎಂಬುದನ್ನು ಅರಿತುಕೊಂಡಿದ್ದೇನೆ. ಅಲ್ಲದೆ, ಸಣ್ಣ ಕೈಗಾರಿಕೆ ವಲಯ ಅಧಿಕ ಸಂಖ್ಯೆಯಲ್ಲಿ ಉದ್ಯೋಗ ನೀಡುತ್ತಿದ್ದು, ಇದನ್ನು ಬಲಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಸಣ್ಣ ಕೈಗಾರಿಕೆಗಳ ಸಂಬಂಧ ಪ್ರಸ್ತುತವಿರುವ ಕೆಲವು ಕಾನೂನುಗಳು ಹಳೆಯದ್ದಾಗಿದೆ. ಮಾಲಕರಿಗೆ ಸ್ವತಂತ್ರ ನೀಡುವ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಎಫ್‌ಕೆಸಿಸಿಐನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಮಾತನಾಡಿ, ರಾಜ್ಯದ ಸಣ್ಣ ಕೈಗಾರಿಕೆ ವಲಯ ಯುವ ಜನರು ಸೇರಿದಂತೆ ಹಲವರಿಗೆ ವಿವಿಧ ಹಂತದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಆದರೆ, ಇಂದು ಈ ಕ್ಷೇತ್ರವೂ ತನ್ನದೇ ಆದ ರೀತಿಯ ಸಮಸ್ಯೆಗಳಿಂದ ಬಳಲುತ್ತಿದೆ. ಈ ಸಂಬಂಧ ಸರಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೈಗಾರಿಕಾ ಎಸ್ಟೇಟ್ ನಿರ್ಮಿಸುವ ಮೂಲಕ ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಆದ್ಯತೆ ನೀಡಬೇಕು. ಸೇವಾ ಭತ್ತೆ ನೀಡುವ ವಿಚಾರದಲ್ಲಿ ಸಣ್ಣ ಕೈಗಾರಿಕೆಗಳನ್ನು ಕಾರ್ಪೋರೇಟ್ ವಲಯಕ್ಕೆ ಸಮಾನವಾಗಿ ನೋಡಬಾರದು ಎಂದು ಅವರು ಇದೇ ಸಂದರ್ಭದಲ್ಲಿ ಕೋರಿದರು. ಕಾರ್ಯಕ್ರಮದಲ್ಲಿ ಭುವನ್‌ರಾಜನ್, ರಾಮಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
.jpg)







