ಮಂಗಳೂರು: ಈಜುಕೊಳದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಮಂಗಳೂರು, ಜೂ.29: ಮೂಡುಶೆಡ್ಡೆ ಸಮೀಪದ ರೆಸಾರ್ಟ್‌ವೊಂದರ ಈಜುಕೊಳದಲ್ಲಿ ವಿದ್ಯಾರ್ಥಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.
ಖಾಸಗಿ ಕಾಲೇಜಿನ ವಿದ್ಯಾರ್ಥಿ ಅಲ್ಟಾನ್ (20) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಯು ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ. ಶನಿವಾರ ಸಂಜೆ ರೆಸಾರ್ಟ್‌ನ ಈಜುಕೊಳದಲ್ಲಿ ಜಲಕ್ರೀಡೆಯಲ್ಲಿದ್ದಾಗ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ವಿಷಯ ತಿಳಿದ ತಕ್ಷಣ ಕಾವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ವಿದ್ಯಾರ್ಥಿಯು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಯು ಹೊರಜಿಲ್ಲೆಯಿಂದ ಬಂದು ಸ್ಥಳೀಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಸದ್ಯ ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ದೂರು ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.





