ನ್ಯೂ ಜೆರ್ಸಿಯಲ್ಲಿ ಸಾಂಸ್ಕೃತಿಕ ಕೇಂದ್ರವಾಗಲಿರುವ ದೇವಾಲಯ: ಮುಖ್ಯಮಂತ್ರಿ ಮೆಚ್ಚುಗೆ

ಬೆಂಗಳೂರು, ಜೂ.30: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೂನ್ 29ರಂದು ನ್ಯೂ ಜೆರ್ಸಿಯ ಸೋಮರ್‍ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ನಿರ್ಮಿಸುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ ಪೂಜೆಗೆ ಸಂಬಂಧಿಸಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು.
ನಂತರ ಮಾತನಾಡಿದ ಅವರು ಆದಿಚುಂಚನಗಿರಿ ಮಹಾಸಂಸ್ಥಾನವು ಅಮೆರಿಕದ ನ್ಯೂ ಜೆರ್ಸಿಯಲ್ಲಿ ನಿರ್ಮಿಸುತ್ತಿರುವ ಈ ದೇವಾಲಯವು ಭಾರತೀಯರ, ಅದರಲ್ಲೂ ಕನ್ನಡಿಗರಿಗೆ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ. ಹೊರನಾಡ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು, ಸಂಸ್ಕೃತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕೃತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಸ್ಥಳೀಯ ಕನ್ನಡಿಗರ ಸಂಘಟನೆಗಳ ಪದಾಧಿಕಾರಿಗಳು ಸಹ ಪಾಲ್ಗೊಂಡಿದ್ದರು.
ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಉಪಸ್ಥಿತರಿದ್ದರು.
ಜೂನ್ 30 ರಂದು ದೇವಾಲಯ ನಿರ್ಮಾಣದ ಶಿಲಾನ್ಯಾಸ ಸಮಾರಂಭ ನಡೆಯಲಿದೆ.










